ಅರಕಲಗೂಡು: ತಾಲೂಕಿನ ರಾಮನಾಥಪುರದಲ್ಲಿ ನ.22ರಂದು ಶ್ರೀ ಮಹರ್ಷಿ ವಾಲ್ಮೀಕಿ ಹಾಗೂ ರಾಜ ವೀರ ಮದಕರಿ ನಾಯಕ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ನಿವೃತ್ತ ಶಿಕ್ಷಕ ಕಾಳಬೋಯಿ ತಿಳಿಸಿದರು.
ತಾಲೂಕು ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಸಮಿತಿ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳು ಹಾಗೂ ಸಮಾಜದ ಗಣ್ಯರು ಭಾಗವಹಿಸಲಿದ್ದಾರೆ. ಮಹರ್ಷಿ ವಾಲ್ಮೀಕಿಯವರ ಆದರ್ಶಗಳು, ಜೀವನ ಸಂದೇಶ ಹಾಗೂ ಸಮಾಜಕ್ಕೆ ನೀಡಿದ ಅಮೂಲ್ಯ ಕೊಡುಗೆಯನ್ನು ಸ್ಮರಿಸುವುದರ ಜತೆಗೆ, ನಾಡಪ್ರಭು ರಾಜ ವೀರ ಮದಕರಿ ನಾಯಕರ ಸಾಹಸ, ಶೌರ್ಯ ಮತ್ತು ನಾಡಿನ ಇತಿಹಾಸವನ್ನು ಯುವಜನತೆಗೆ ಪರಿಚಯಿಸುವ ಉದ್ದೇಶದಿಂದ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಾರ್ಯಕ್ರಮದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಸಮಾಜದ ಒಗ್ಗಟ್ಟು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ವೇದಿಕೆಯಾಗಲಿದೆ ಎಂದು ಹೇಳಿದರು.
ಮುಖಂಡರಾದ ನಾಗಣ್ಣ, ಲೋಕೇಶ್, ಸಿದ್ದರಾಜು, ಪಾಂಡು ಗೋಷ್ಠಿಯಲ್ಲಿದ್ದರು.