ಶ್ರವಣಬೆಳಗೊಳ: ವಿಶ್ವವಿಖ್ಯಾತ ಜೈನ ಯಾತ್ರಾಸ್ಥಳ ಶ್ರವಣಬೆಳಗೊಳದ ವಿಂಧ್ಯಗಿರಿ ಬೆಟ್ಟಕ್ಕೆ ರೋಪ್‌ವೇ ನಿರ್ಮಾಣ ಹಾಗೂ ರಸ್ತೆ ವಿಸ್ತರಣೆ ಕಾಮಗಾರಿಗೆ ಲೋಕೋಪಯೋಗಿ ಇಲಾಖೆಯಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸುವಂತೆ ಶಾಸಕ ಸಿ.ಎನ್.ಬಾಲಕೃಷ್ಣ ನೇತೃತ್ವದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ಶ್ರವಣಬೆಳಗೊಳ ಕ್ಷೇತ್ರಕ್ಕೆ ದೇಶ-ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಹಾಗೂ ಭಕ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿಂಧ್ಯಗಿರಿ ಬೆಟ್ಟಕ್ಕೆ ರೋಪ್‌ವೇ ನಿರ್ಮಾಣ ಹಾಗೂ ಕ್ಷೇತ್ರದ ಪ್ರಮುಖ ರಸ್ತೆಗಳ ವಿಸ್ತೀರಣಕ್ಕೆ ಆದ್ಯತೆ ನೀಡುವಂತೆ ನಿಯೋಗ ಮನವಿ ಮಾಡಿತು. ಕ್ಷೇತ್ರದ ಅಭಿವೃದ್ಧಿ ಹಾಗೂ ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ದೃಷ್ಟಿಯಿಂದ ಈ ಕಾಮಗಾರಿಗಳು ಮಹತ್ವದ್ದಾಗಿವೆ ಎಂದು ಸಚಿವರ ಗಮನಕ್ಕೆ ತರಲಾಯಿತು.
ಮನವಿಗೆ ಸ್ಪಂದಿಸಿದ ಸಚಿವ ಸತೀಶ್ ಜಾರಕಿಹೊಳಿ, ರೋಪ್‌ವೇ ಹಾಗೂ ರಸ್ತೆ ವಿಸ್ತರಣೆ ಕಾಮಗಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಶ್ರೀ ಕ್ಷೇತ್ರ ಶ್ರವಣಬೆಳಗೊಳ ದಿಗಂಬರ ಜೈನ ಮಹಾಸಂಸ್ಥಾನ ಮಠದ ಪ್ರತಿನಿಧಿ ರಾಜೇಶ್ ಖನ್ನಾ ಇದ್ದರು.