ಶ್ರವಣಬೆಳಗೊಳ: ಹೋಬಳಿಯ ದಮ್ಮನಿಂಗಲ ಕ್ಲಸ್ಟರ್ ವ್ಯಾಪ್ತಿಯ ಕಬ್ಬಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಎ.ಸಿ.ಇಂದಿರಾ ಅವರು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಶಾಖೆ, ಬೆಂಗಳೂರು ವತಿಯಿಂದ ನೀಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನ.22ರ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಶಿಕ್ಷಣ ಹಕ್ಕು ಕಾಯ್ದೆಯ ರೂವಾರಿ ಅನಿತಾ ಕೌಲ್ ಅವರ ಸ್ಮರಣಾರ್ಥ ನೀಡುವ ಈ ಪ್ರಶಸ್ತಿಯನ್ನು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಮನೋವೈದ್ಯ ಡಾ. ಸಿ.ಆರ್.ಚಂದ್ರಶೇಖರ್ ಹಾಗೂ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಸೇರಿದಂತೆ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.
ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಇಂದಿರಾ ಅವರು ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿ, ಸರ್ವಾಂಗೀಣ ವ್ಯಕ್ತಿತ್ವ ವಿಕಸನ ಹಾಗೂ ಶಾಲೆಯ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇವರ ಶೈಕ್ಷಣಿಕ ಸೇವೆ ಮತ್ತು ಬದ್ಧತೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.