ಅರಕಲಗೂಡು: ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಹಾಗೂ ಕರಾಟೆ ಕಿಂಗ್ ಶಂಕರನಾಗ್ ಸೇನಾ ಸಮಿತಿ ವತಿಯಿಂದ ತಾಲೂಕಿನ ಯಗಟಿ ಗ್ರಾಮದಲ್ಲಿ ಆಯೋಜಿಸಿದ್ದ ಪಂಚಾಯಿತಿ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಎ.ಮಂಜು ಚಾಲನೆ ನೀಡಿದರು.
ಅರಕಲಗೂಡು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ತಂಡಗಳು ಭಾಗವಹಿಸಿರುವ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎ.ಮಂಜು, ಕ್ರೀಡೆ ಯುವಜನರಲ್ಲಿ ಶಿಸ್ತು, ಆತ್ಮವಿಶ್ವಾಸ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಗ್ರಾಮೀಣ ಪ್ರದೇಶದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಇಂತಹ ಪಂದ್ಯಾವಳಿಗಳು ಉತ್ತಮ ವೇದಿಕೆಯಾಗಿವೆ ಎಂದರು.
ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಪ್ರತಿ ಆಟಗಾರರು ಸೋಲು- ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಫೂರ್ತಿ ಮೆರೆಯಬೇಕು. ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಉತ್ತಮ ಪ್ರದರ್ಶನ ಹಾಗೂ ಸ್ನೇಹ-ಸೌಹಾರ್ದ ಮುಖ್ಯವಾಗಿದ್ದು, ಎಲ್ಲ ತಂಡಗಳು ಶಿಸ್ತುಬದ್ಧವಾಗಿ ಪಂದ್ಯಗಳಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಅರಕಲಗೂಡು ವಿಧಾನಸಭಾ ಕ್ಷೇತ್ರದ ಎಲ್ಲ ಪಂಚಾಯಿತಿ ವ್ಯಾಪ್ತಿಯ ತಂಡಗಳನ್ನು ಒಂದೇ ವೇದಿಕೆಗೆ ತಂದು ಪಂದ್ಯಾವಳಿ ಆಯೋಜಿಸಿರುವ ಸಂಘಟಕರ ಕಾರ್ಯ ಶ್ಲಾಘನೀಯ. ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಎಲ್ಲ ತಂಡಗಳು ಉತ್ತಮ ಪ್ರದರ್ಶನ ನೀಡಲಿ ಎಂದು ಹಾರೈಸಿದರು.