ಜಿಲ್ಲೆ

ಬಾಲ ಕಾರ್ಮಿಕ ತಡೆ ಕುರಿತು ಜಾಗೃತಿ ಮೂಡಿಸಿ; ಎಡಿಸಿ ಪೂಜಾರ ವೀರಮಲ್ಲಪ್ಪ ಸೂಚನೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಜೂ.12ರಂದು ವಿವಿಧ ಇಲಾಖೆಗಳ ಸಹಯೋಗದಲ್ಲಿ ಅರ್ಥಪೂರ್ಣವಾಗಿ ಆಯೋಜಿಸುವಂತೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕುರಿತ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಾಲಾ ಮಕ್ಕಳಿಂದ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕುರಿತು ನಗರದ ಪ್ರಮುಖ ಬೀದಿಗಳಲ್ಲಿ ಹಾಗೂ ನಾಗೇಂದ್ರನಮಟ್ಟಿಯಲ್ಲಿ ಜಾಗೃತಿ ಜಾಥಾ ಆಯೋಜಿಸಲು ಸೂಚಿಸಿದರು.
ಸಾರ್ವಜನಿಕರಿಗೆ ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕುರಿತು ಜಾಗೃತಿ ಮೂಡಿಸಬೇಕು ಹಾಗೂ ಶಿಕ್ಷಣದ ಮಹತ್ವ ತಿಳಿಸಬೇಕು.ಬಾಲಕ ಕಾರ್ಮಿಕರನ್ನು ಮರಳಿ ಶಾಲೆಗೆ ದಾಖಲಿಸಲು ಶ್ರಮಿಸಿದ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸಬೇಕು. ತಾಲೂಕು ಮಟ್ಟದಲ್ಲಿ ಕಾರ್ಮಿಕ ನಿರೀಕ್ಷಕರು, ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಸಹಯೋಗದಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಯೋಜಿಸಬೇಕು ಎಂದು ತಿಳಿಸಿದರು.
ಜೂ.12ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಅಂಗವಾಗಿ ಪ್ರಮಾಣ ವಚನ ಸ್ವೀಕರಿಸಬೇಕು ಎಂದು ಸೂಚಿಸಿದರು. ಜಿಲ್ಲೆಯಲ್ಲಿ 2022-23ನೇ ಸಾಲಿನಲ್ಲಿ ವಿವಿಧೆಡೆ ದಾಳಿ ನಡೆಸಿ 6 ಕಿಶೋರ ಕಾರ್ಮಿಕರನ್ನು ಪತ್ತೆ ಹಚ್ಚಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಡಿವೈಎಸ್‌ಪಿ ಶಿವಾನಂದ ಚಲವಾದಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಕಾರ್ಮಿಕ ನಿರೀಕ್ಷಕಿ ಮಮತಾಜ ಬೇಗಂ, ಮೀನಾಕ್ಷಿ, ಲತಾ ಪಿ.ಎಸ್, ತಹಶೀಲ್ದಾರ ಗಿರೀಶ ಸ್ವಾದಿ, ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ, ವಿವಿಧ ತಾಲೂಕುಗಳ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸ್ವಯಂ ಸೇವಾ ಸಂಘಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಜಾಥಾ, ವಿವಿಧ ಸ್ಪರ್ಧೆ ಆಯೋಜನೆ :
ಜೂ.12ರಂದು ಬೆಳಗ್ಗೆ 9.30ಕ್ಕೆ ನಗರದ ಗೆಳೆಯರ ಬಗಳ ಶಾಲೆ ಆವರಣದಿಂದ ಜಾಗೃತಿ ಜಾಥಾ ಹೊರಡಲಿದೆ. ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹೊಸಮನಿ ಸಿದ್ದಪ್ಪ ವೃತ್ತದ ಮೂಲಕ ಮರಳಿ ಶಾಲೆಗೆ ಆಗಮಿಸಲಿದೆ. ಗೆಳೆಯರ ಬಳಗ ಶಾಲೆಯಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿದೆ. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಕುಳಲಿ ತಿಳಿಸಿದರು.