ಹಾವೇರಿ: ಹಾವೇರಿ ಜಿಲ್ಲೆಯ ಏಳು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ 39 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 113 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ ಸಂದರ್ಭದಲ್ಲಿ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಜಿ ಪೂರ್ಣಗೊಳಿಸಲು ಜ.5ರವರೆಗೆ ಕಾಲಾವಕಾಶ ನೀಡಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 2,275 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 974 ಅರ್ಜಿಗಳು ಪೂರ್ಣಗೊಂಡಿದ್ದು, 1,301 ಅಭ್ಯರ್ಥಿಗಳು ಅರ್ಜಿಗಳು ಅಪೂರ್ಣಗೊಂಡಿವೆ. ಅಂಗನವಾಡಿ ಸಹಾಯಕಿಯರ ಹುದ್ದೆಗೆ 1,843 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 980 ಅರ್ಜಿಗಳು ಪೂರ್ಣಗೊಂಡಿವೆ. ಉಳಿದ 863 ಅಭ್ಯರ್ಥಿಗಳ ಅರ್ಜಿಗಳು ವಿವಿಧ ಕಾರಣಗಳಿಂದ ಅಪೂರ್ಣಗೊಂಡಿವೆ.
ಈ ಅಪೂರ್ಣಗೊಂಡ ಅರ್ಜಿಗಳನ್ನು ಪೂರ್ಣಗೊಳಿಸಲು ಡಿ.26ರಿಂದ ಜ.5ರವರೆಗೆ ಕಾಲಾವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್https//karnemakaone.kar.nic.in/abcd/ ಮೂಲಕ ನಿಗಧಿತ ಅವಧಿಯಲ್ಲಿ ಅಪೂರ್ಣಗೊಂಡ ಅರ್ಜಿಗಳನ್ನು ಪೂರ್ಣಗೊಳಿಸಬೇಕು. ಅಧಿಸೂಚನೆ ದಿನಾಂಕಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಮಾತ್ರ ಪರಿಗಣಿಸಲಾಗುವುದು. ಅಧಿಸೂಚನೆಯ ಷರತ್ತುಗಳು ಮತ್ತು ಮಾನದಂಡಗಳಿಗೆ ಒಳಪಟ್ಟಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಪೂರ್ಣಗೊಳಿಸಲು ಹಾಗೂ ಅಪೂರ್ಣಗೊಂಡ ಅರ್ಜಿಗಳ ಮಾಹಿತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.