ಹಾವೇರಿ: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹಧನ ಸೇರಿಸಿ ಮಾಸಿಕ ಕನಿಷ್ಠ 10 ಸಾವಿರ ರೂ. ನೀಡುವ ಆರನೇ ಗ್ಯಾರಂಟಿಯನ್ನು ಕಳೆದ ಏಪ್ರಿಲ್‌ನಿಂದ ಅನ್ವಯವಾಗುವಂತೆ ಜಾರಿಗೊಳಿಸಲು ಆಗ್ರಹಿಸಿ ನಗರದಲ್ಲಿ ಮಂಗಳವಾರ ಜಿಲ್ಲೆಯ ಸಾವಿರಾರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ(ಎಐಯುಟಿಯುಸಿ) ಕರೆ ನೀಡಿದ್ದ ಆಶಾ ಕಾರ್ಯಕರ್ತೆಯರ ರಾಜ್ಯವ್ಯಾಪಿ ಅಹೋರಾತ್ರಿ ಪ್ರತಿಭಟನಾ ಧರಣಿಗೆ ಜಿಲ್ಲೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಬೆಳಗ್ಗೆ ನಗರದ ಕಾಗಿನೆಲೆ ರಸ್ತೆಯಲ್ಲಿರುವ ಮುರುಘರಾಜೇಂದ್ರ ಮಠದ ಆವರಣದಿಂದ ಹೊಸಮನಿ ಸಿದ್ದಪ್ಪ ವೃತ್ತದ ಮಾರ್ಗವಾಗಿ ಸಂಚರಿಸಿ ಹುತಾತ್ಮ ಮೈಲಾರ ಮಹದೇವಪ್ಪ ವೃತ್ತ ತಲುಪಿತು. ಗುಲಾಬಿ ಸೀರೆಯುಟ್ಟ ಆಶಾಗಳು ಪಾದಯಾತ್ರೆಯುದ್ದಕ್ಕೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಧರಣಿಯಲ್ಲಿ ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ವಿರೇಶ ಎನ್.ಎಸ್. ಮಾತನಾಡಿ, 2025 ಜನವರಿಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಸರ್ಕಾರ ಸಭೆ ಕರೆದು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಆದರೆ ಆ ಭರವಸೆ ಈವರೆಗೆ ಈಡೇರಲಿಲ್ಲ. ಬದಲಾಗಿ ಆಶಾ ಸಾಫ್ಟ್ ಎಂದು ಅವೈಜ್ಞಾನಿಕ ತಂತ್ರಜ್ಞಾನವನ್ನು ಜಾರಿಗೊಳಿಸಿ ಆಶಾ ಕಾರ್ಯಕರ್ತೆಯರಿಗೆ ಇನ್ನಿಲ್ಲದ ಸಂಕಷ್ಟ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯ ಬಜೆಟ್‌ನಲ್ಲಿ ಎಲ್ಲ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ಒಂದು ಸಾವಿರ ರೂಪಾಯಿ ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಿಸಬೇಕೆಂದು ಆಗ್ರಹಿಸಿದರು.
ಸಂಘದ ಉಪಾಧ್ಯಕ್ಷೆ ಮಂಜುಳಾ ಮಾಸೂರ, ಪ್ರಮುಖರಾದ ರತ್ನಾ ಗಿರಣಿ, ಮಧುಲತಾ, ಪುಷ್ಪಾ ಮಡ್ಲೂರಮಠ, ರೇಖಾ ಕರಿಗಾರ, ರೇಹನಾಬಾನು, ರತ್ನಾ ಮಕರವಳ್ಳಿ, ಹೂವಕ್ಕ ಮಕರವಳ್ಳಿ, ನೀಲವ್ವ ಲಮಾಣಿ, ಮಂಗಳಾ ಚಪ್ಪರದಹಳ್ಳಿಮಠ, ಸವಿತಾ ಪಾಟೀಲ, ವಿನೋದಾ ಹೊಂಡದ, ಪ್ರೇಮಾ, ರೂಪಾ, ಗಂಗಮ್ಮ, ಸೇರಿದಂತೆ ಜಿಲ್ಲೆಯ ಎಂಟು ತಾಲೂಕುಗಳ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಪ್ರಸ್ತುತ 7 ಸಾವಿರ ವೇತನ
ಆಶಾ ಕಾರ್ಯಕರ್ತೆಯರು ತಿಂಗಳಿಗೆ 15 ಸಾವಿರ ರೂ. ವೇತನ ಪಡೆಯುತ್ತಿದ್ದಾರೆ ಎಂದು ಕೆಲ ಪಟ್ಟಭದ್ರ ಹಿತಾಸಕ್ತಿಗಳು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಆದರೆ, ವಾಸ್ತವವಾಗಿ ತಿಂಗಳಿಗೆ 7 ಸಾವಿರ ರೂ. ಪಡೆಯುತ್ತಿದ್ದೇವೆ. ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು ಕೈಬಿಡಬೇಕು. ಈ ಹೆಸರಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು. ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣೆಯ ಅವೈಜ್ಞಾನಿಕ ಮೌಲ್ಯಮಾಪನ ಕೈಬಿಡಬೇಕು, ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು. 2025ರ ಜೂನ್, ಜುಲೈನಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿಯೂ ಜಾರಿಗೊಳಿಸಬೇಕು ಎಂದು ಸಂಘದ ಜಿಲ್ಲಾಧ್ಯಕ್ಷೆ ಜಯಶೀಲಾ ಬಂಕಾಪುರಮಠ ಆಗ್ರಹಿಸಿದರು.