ಜಿಲ್ಲೆ

ಜಿಲ್ಲಾ, ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.
ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ವಿಜೇತರಿಗೆ ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ 31 ಸಾವಿರ ರೂ., ದ್ವಿತೀಯ 21 ಸಾವಿರ ರೂ. ಮತ್ತು ತೃತೀಯ 11 ಸಾವಿರ ರೂ. ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಥಮ 3 ಸಾವಿರ ರೂ. ದ್ವಿತೀಯ 2 ಸಾವಿರ ರೂ. ಮತ್ತು ತೃತೀಯ 1 ಸಾವಿರ ರೂ. ಬಹುಮಾನ ನೀಡಲಾಗುವುದು.
ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಪ್ರೌಢಶಾಲೆ ವಿದ್ಯಾರ್ಥಿಗಳು ಸುಮಾರು 900 ಪದ, ಪದವಿ ಪೂರ್ವ ವಿದ್ಯಾರ್ಥಿಗಳು 1,500 ಪದಗಳು ಹಾಗೂ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಸುಮಾರು 2,000 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು. ಪ್ರಬಂಧ ಸ್ವರಚಿತವಾಗಿರಬೇಕು. ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು. ಆಯಾ ಶಾಲಾ- ಕಾಲೇಜುಗಳ ಮುಖ್ಯಸ್ಥರು ಸೆ.5ರೊಳಗೆ ಪ್ರಬಂಧ ಸ್ಪರ್ಧೆ ಆಯೋಜಿಸಿ, ವಾರ್ತಾ ಇಲಾಖೆಗೆ ಸಲ್ಲಿಸಬೇಕು ಎಂದು ವಾರ್ತಾ ಇಲಾಖೆ ಪ್ರಕಟಣೆ ತಿಳಿಸಿದೆ.