ಜಿಲ್ಲೆ

ಕೂಡಲೇ ಹಾಸ್ಟೆಲ್ ಆರಂಭಿಸಲು ಬೊಮ್ಮಾಯಿ ಆಗ್ರಹ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮಂಜೂರಾದ ಐದು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಹುದ್ದೆಗಳನ್ನು ಸೃಜಿಸಿ ರಾಜ್ಯ ಸರ್ಕಾರ ಆದೇಶ ಮಾಡಿರುವುದನ್ನು ಸ್ವಾಗತಿಸುತ್ತೇನೆ. ಕೂಡಲೇ ಹಾಸ್ಟೆಲ್‌ಗಳ ಕಾರ್ಯಾರಂಭಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ನಮ್ಮ ಸರ್ಕಾರದ ಅವಧಿಯಲ್ಲಿ ಜಿಲ್ಲೆಯ ಗೊಟಗೋಡಿ ಜಾನಪದ ವಿಶ್ವವಿದ್ಯಾಲಯದಲ್ಲಿ ಮೆಟ್ರಿಕ್ ನಂತರದ ಸ್ನಾತಕೊತ್ತರ ವಿದ್ಯಾರ್ಥಿ ನಿಲಯ, ಶಿಗ್ಗಾಂವಿ ಪಟ್ಟಣದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಗುಡ್ಡದ ಚನ್ನಾಪುರದ ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ಹಾಸ್ಟೆಲ್ ಹಾಗೂ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ಹಾಸ್ಟೆಲ್ ಮತ್ತು ಸವಣೂರ ಪಟ್ಟಣದ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್‌ಗಳನ್ನು ಮಂಜೂರು ಮಾಡಿ ಆದೇಶಿಸಲಾಗಿತ್ತು.
ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಲು ವಿಳಂಬ ಧೋರಣೆ ಅನುಸರಿಸಿತ್ತು. ತಡವಾಗಿಯಾದರೂ ಹುದ್ದೆಗಳನ್ನು ಸೃಜಿಸಿ ಆದೇಶಿದ್ದು, ಸ್ವಾಗತಾರ್ಹ. ನಮ್ಮ ಅವಧಿಯಲ್ಲಿ ಮೂರು ಕಟ್ಟಡಗಳ ನಿರ್ಮಾಣ ಮಾಡಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ವಿದ್ಯಾರ್ಥಿ ನಿಲಯಗಳನ್ನು ಆದಷ್ಟು ಬೇಗ ಕಾರ್ಯಾರಂಭ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಕ್ರಮ ವಹಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಪ್ರಕಟಣೆ ಮೂಲಕ ಬೊಮ್ಮಾಯಿ ಒತ್ತಾಯಿಸಿದ್ದಾರೆ.