ಹಾವೇರಿ: ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ವಿರೋಧ ಪಕ್ಷಗಳ ಸಂಸದರನ್ನು ಅಮಾನತು ಮಾಡಿದ ಕ್ರಮ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಮೈಲಾರ ಮಹದೇವ ವೃತ್ತದಿಂದ ಪ್ರತಿಭಟನಾ ರ‌್ಯಾಲಿ ಆರಂಭಿಸಿದ ನೂರಾರು ಕಾರ್ಯಕರ್ತರು ಜೆ.ಪಿ.ವೃತ್ತದ ಮೂಲಕ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಆಗಮಿಸಿದರು. ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಕೆಲಕಾಲ ರಸ್ತೆ ಸಂಚಾರ ತಡೆದು ಪ್ರತಿಭಟಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ ಮಾತನಾಡಿ, ಭದ್ರತಾ ಲೋಪಕ್ಕೆ ಸ್ಪಷ್ಟೀಕರಣ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಅಗ್ರಹಿಸಿದರೆ, ರಾಜ್ಯಸಭೆ ಹಾಗೂ ಲೋಕಸಭೆ ಸಂಸದರನ್ನು ಅಮಾನುತು ಮಾಡಿದ್ದಾರೆ. ವಿಪಕ್ಷಗಳನ್ನು ಹೊರಗಿಟ್ಟು ಸಂಸತ್‌ನಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡಿದ್ದು ಪ್ರಜಾಪ್ರಭುತ್ವ ವಿರೋಧಿ ನೀತಿ ಎಂದು ದೂರಿದರು. ವಿರೋಧ ಪಕ್ಷಕ್ಕೆ ಇರುವ ಪ್ರಶ್ನಿಸುವ ಹಕ್ಕನ್ನು ಮೊಟಕು ಗೊಳಿಸುವ ಹುನ್ನಾರ ನಡೆಸುತ್ತಿರುವುದು ಖಂಡನೀಯ ಎಂದರು.
ಕೇಂದ್ರ ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಸಂಸತ್ ಸದಸ್ಯರ ಅಮಾನತು ಹಿಂಪಡೆದು ಪುನರ್ ಲೋಕಸಭೆಗೆ ಪರಿಗಣಿಸಬೇಕು. ಇಲ್ಲದಿದ್ದರೆ ಉಗ್ರವಾದ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ ಮಾತನಾಡಿ, ಇತ್ತೀಚೆಗೆ ಸಂಸತ್ ಭವನದಲ್ಲಿ ನಡೆದ ಹೊಗೆ ಬಾಂಬ್ ದಾಳಿ ಪ್ರಕರಣಕ್ಕೆ ಭದ್ರತಾ ವೈಫಲ್ಯ ಕಾರಣವಾಗಿದ್ದು, ಇದು ಬಿಜೆಪಿ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಸಂಸದರನ್ನು ಅಮಾನತುಗೊಳಿಸಿ ಪ್ರಧಾನಿ ಮೋದಿ ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದಾರೆ. ಈ ಕೂಡಲೇ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಸವರಾಜ ಬಳ್ಳಾರಿ, ಕೆ.ಎಂ.ಸುಂಕದ, ಪ್ರಭು ಬಿಷ್ಟನಗೌಡ್ರ, ಸಂಜಯಗಾಂಧಿ ಸಂಜೀವಣ್ಣನವರ, ಪ್ರೇಮಾ ಪಾಟೀಲ, ಗಣೇಶ ಬಿಷ್ಟಣ್ಣನವರ, ಎಂ. ಜೆ.ಮುಲ್ಲಾ, ಶಾಂತಕ್ಕ ಶಿವಪೂರ, ಪೀರಸಾಬ್ ಚೋಪದಾರ, ಸುನೀಲ ಜಮಾದಾರ, ಹಜ್ಮತಬಿ ರಿತ್ತಿ, ಪ್ರೇಮಾ, ಮಂಜು ದದ್ದೂರ, ಅತಾವುಲ್ಲಾ ಖಾಜಿ, ರಮೇಶ ಮಡಿವಾಳರ, ಮಲ್ಲೇಶಪ್ಪ ಪಟ್ಟಣಶೆಟ್ಟಿ ಸೇರಿದಂತೆ ಇತರರು ಇದ್ದರು.