ಹಾವೇರಿ: ಡೆಂಘೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯೊಂದಿಗೆ ಇತರೆ ಇಲಾಖೆಗಳು ಹಾಗೂ ಸಾರ್ವಜನಿಕರೂ ಕೈಜೋಡಿಸಬೇಕು. ಎಲ್ಲರೂ ಸಮನ್ವಯದಿಂದ ಡೆಂೆ ನಿಯಂತ್ರಣ ಕಾರ್ಯವನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು.
ದೇವಗಿರಿಯ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಜಿಲ್ಲಾ ಟಾಸ್ಕ್‌ಫೋರ್ಸ್ ಹಾಗೂ ಅಂತರ ಇಲಾಖೆಗಳ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲ ಕಚೇರಿಗಳ ಒಳಗೆ ಹಾಗೂ ಪರಿಸರದಲ್ಲಿ ವಾರಕ್ಕೊಮ್ಮೆ ಲಾರ್ವಾ ಸಮೀಕ್ಷೆ ಕೈಗೊಳ್ಳಬೇಕು. ಲಾರ್ವಾ ಸಮೀಕ್ಷೆ ಮತ್ತು ನಿರ್ಮೂಲನೆ ಕಾರ್ಯದಲ್ಲಿ ಸ್ಥಳೀಯ ನಗರ ಸಂಸ್ಥೆಗಳ ಆರೋಗ್ಯ ನಿರೀಕ್ಷಕರು ಭಾಗವಹಿಸಬೇಕು ಎಂದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತಿ ಗ್ರಾಮಗಳಲ್ಲಿ ಮೈಕಿಂಗ್ ಮತ್ತು ಭಿತ್ತಿ ಪತ್ರಗಳ ವಿತರಣೆ ಹಾಗೂ ಡಂಗುರ ಸಾರುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಲಭ್ಯವಿರುವ ಫಾಗಿಂಗ್ ಯಂತ್ರಗಳ ಮೂಲಕ ತುರ್ತು ಸಂದರ್ಭಗಳಲ್ಲಿ ಒಳಾಂಗಣ ಧೂಮೀಕರಣ ಕೈಗೊಳ್ಳಬೇಕು ಎಂದು ಸೂಚಿಸಿದರು.
ಬಸ್ ನಿಲ್ದಾಣ, ರೈಲು ನಿಲ್ದಾಣ, ಮಾರುಕಟ್ಟೆ, ಕಾಲೇಜುಗಳ ಆವರಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಡೆಂಘೆ ರೋಗದ ಜಾಗೃತಿಮೂಡಿಸಲು ಫ್ಲೆಕ್ಸ್‌ಗಳನ್ನು ಅಳಡಿಸಬೇಕು. ಘನತಾಜ್ಯ ವಸ್ತುಗಳ ಮೇಲೆ ಮಳೆನೀರು ಸಂಗ್ರಹವಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ವಸತಿ ನಿಲಯಗಳಲ್ಲಿ ಸೊಳ್ಳೆ ಪರೆದಗಳನ್ನು ಉಪಯೋಗಿಸಬೇಕು. ಕಿಟಕಿಗಳಿಗೆ ಸೊಳ್ಳೆ ನಿರೋಧಕ ಜಾಲರಿ ಅಳವಡಿಸಬೇಕು. ಎಲ್ಲ ವಸತಿ ನಿಲಯಗಳಲ್ಲಿ ವಾರಕ್ಕೊಮ್ಮೆ ಲಾರ್ವಾ ಸಮೀಕ್ಷೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ದೇವಸ್ಥಾನಗಳು, ಹೋಟೆಲ್, ಕಲ್ಯಾಣ ಮಂಟಪ, ಸಿನಿಮಾ ಮಂದಿರಗಳು, ಪಾರ್ಕ್‌ಗಳಿಗೆ ವಾರಕ್ಕೊಮ್ಮೆ ಭೇಟಿ ಲಾರ್ವಾ ಸಮೀಕ್ಷೆ ಮತ್ತು ನಿರ್ಮೂಲನೆ ಕಾರ್ಯಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ.ಪ್ರದೀಪಕುಮಾರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್.ಹಾವನೂರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಮಮತಾ ಎಚ್., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ನಿಲೇಶ ಎಂ.ಎನ್., ಡಿಡಿಪಿಐ ಸುರೇಶ ಹುಗ್ಗಿ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಶಾಲಾ- ಕಾಲೇಜಲ್ಲಿ ಜಾಗೃತಿ ಮೂಡಿಸಿ
ಡೆಂಘೆ ಮತ್ತು ಇತರೆ ಕೀಟಜನ್ಯ ರೋಗಗಳ ನಿಯಂತ್ರಣದ ಅರಿವು ಮೂಡಿಸಲು ವಿದ್ಯಾರ್ಥಿಗಳು ಮತ್ತು ಸಮುದಾಯದ ಸಹಭಾಗಿತ್ವ ಹಾಗೂ ಪಾತ್ರ ಕುರಿತು ಭಾಷಣ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಕಿರುನಾಟಕಗಳನ್ನು ಹಮ್ಮಿಕೊಳ್ಳಬೇಕು. ಶಾಲಾ ಪ್ರಾರ್ಥನೆ ಸಮಯದಲ್ಲಿ ಮಕ್ಕಳಿಗೆ ಆರೋಗ್ಯ ಶಿಕ್ಷಣ ನೀಡಬೇಕು ಎಂದು ಡಿಸಿ ಸಲಹೆ ನೀಡಿದರು.
ಮೈತುಂಬಾ ಬಟ್ಟೆ ಧರಿಸಿ
ಸಾರ್ವಜನಿಕರು ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರು ಸಂಗ್ರಹಿಸುವ ಪರಿಕರಗಳಾದ ಸಿಮೆಂಟ್ ತೊಟ್ಟಿ, ಡ್ರಮ್, ಬ್ಯಾರೆಲ್ ಇತ್ಯಾದಿಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವ ಮೂಲಕ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕೈಜೋಡಿಸಬೇಕು. ಸೊಳ್ಳೆಪರದೆ ಬಳಸಬೇಕು, ಮೈತುಂಬಾ ಬಟ್ಟೆ ಧರಿಸಬೇಕು ಹಾಗೂ ಕಿಟಕಿ ಬಾಗಿಲುಗಳಿಗೆ ಸೊಳ್ಳೆ ನಿರೋಧಕ ಜಾಲರಿ ಅಳವಡಿಸಬೇಕು. ಬಳಸುವ ನೀರಿನಲ್ಲಿ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ತಡೆಯಲು ನೀರಿಗೆ ಕೊಬ್ಬರಿ ಎಣ್ಣೆ ಹಾಕಬೇಕು. ಜ್ವರದ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಡಿಸಿ ತಿಳಿಸಿದರು.