ಹಾವೇರಿ: ಹಾವೇರಿ (ಸಾಮಾನ್ಯ ವರ್ಗ) ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ನಡೆಯುವ ಸಾರ್ವತ್ರಿಕ ಚುನಾವಣೆಗೆ ಶುಕ್ರವಾರ ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ ಚುನಾವಣಾ ಅಧಿಸೂಚನೆ ಹೊರಡಿಸಿದ್ದಾರೆ.
ಚುನಾವಣಾ ಆಧಿಸೂಚನೆ ಪ್ರಕಾರ ಏಪ್ರಿಲ್ 12ರಿಂದ 19ರವರೆಗೆ ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆವರೆಗೆ ಉಮೇದುವಾರರು ಅಥವಾ ಅವರ ಸೂಚಕರು ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅಥವಾ ಸಹಾಯಕ ಚುನಾವಣಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಅವರಿಗೆ ನಾಮಪತ್ರ ಸಲ್ಲಿಸಬಹುದಾಗಿದೆ.
ಏಪ್ರಿಲ್ 20ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದ್ದು, ಏಪ್ರಿಲ್ 22ರಂದು ಮಧ್ಯಾಹ್ನ 3 ಗಂಟೆ ಒಳಗಾಗಿ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಮೇ 7ರಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.