ಜಿಲ್ಲೆ

ಕಾವೇರಿ 2.0 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶ ಸಂಯೋಜನೆ ಸೆ.23ರಿಂದ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ 2.0 ತಂತ್ರಾಂಶದೊಂದಿಗೆ ಸೆ.23ರಿಂದ ಸಂಯೋಜನೆಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.
ಜಿಲ್ಲಾ ವ್ಯಾಪ್ತಿಯ ಎಲ್ಲ ಉಪ ನೋಂದಣಿ ಕಚೇರಿ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಲು ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದಲೇ ಪಡೆಯಬೇಕಿರುತ್ತದೆ.
ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯಬಹುದು, ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ. ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿ ತಪ್ಪಿಸಬಹುದು. ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸಬಹುದು ಹಾಗೂ ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ, ಕಾನೂನು ತೊಂದರೆಗಳನ್ನು ತಪ್ಪಿಸಬಹುದು. ಆದ್ದರಿಂದ ಸಾರ್ವಜನಿಕರು ಇ-ಸ್ವತ್ತಿನ ಸಂಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.