ಹಾವೇರಿ: ಬೇಸಿಗೆಯಲ್ಲಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ಆಡಳಿತದೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಿದರು. ಮುಂಬರುವ ದಿನಗಳಲ್ಲಿ ನೀರಿನ ಸಮಸ್ಯೆ ಉಂಟಾಗುವ ಗ್ರಾಮಗಳ ಸಮೀಕ್ಷೆ ನಡೆಸಿ ಎಂದು ತಹಸೀಲ್ದಾರ್‌ಗಳು ಹಾಗೂ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.
ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಖಾಸಗಿ ಹಾಗೂ ಸರ್ಕಾರಿ ಬೋರ್‌ವೆಲ್‌ಗಳ ಸಮೀಕ್ಷೆ ನಡೆಸಿ, ನೀರಿನ ಸಮಸ್ಯೆ ಉಂಟಾಗುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸಲು ಮೊದಲೇ ಟ್ಯಾಂಕರ್‌ಗಳನ್ನು ವ್ಯವಸ್ಥೆ ಮಾಡಿಕೊಳ್ಳಬೇಕು ಹಾಗೂ ಪ್ರತಿ ಟ್ಯಾಂಕರ್‌ನ ನೋಂದಣಿ ಮಾಡಿಸಬೇಕು. ಯಾವ ಮೂಲದಿಂದ ನೀರು ಒದಗಿಸಲಾಗುತ್ತಿದೆ ಎಂಬ ವಿವರವಾದ ವರದಿ ತಯಾರಿಸಿ ಸಲ್ಲಿಸಿ ಎಂದು ಸೂಚಿಸಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗೀತಾ ಅವರು ನಗರ ಕುಡಿಯುವ ನೀರಿನ ವ್ಯವಸ್ಥೆ ಕುರಿತು ಮಾತನಾಡಿ, ಜಾಕವೆಲ್‌ಗಳಲ್ಲಿ ತಾತ್ಕಾಲಿಕ ಸ್ಯಾಂಡ್ ಬ್ಯಾಕ್ ಹಾಕಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸದ್ಯ ಯಾವುದೇ ನೀರಿನ ಸಮಸ್ಯೆ ಎದುರಾಗಿಲ್ಲ. ಬರುವ ದಿನಗಳಲ್ಲಿ ಬಂಕಾಪುರ ಪಟ್ಟಣಕ್ಕೆ ಸಮಸ್ಯೆಯಾಗುವ ನಿರೀಕ್ಷೆ ಇದ್ದು, ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನಾರಾಯಣರೆಡ್ಡಿ ಕನಕರೆಡ್ಡಿ, ಹಾವೇರಿ ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ ಸೇರಿದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ತಾಲೂಕುಗಳ ತಹಸೀಲ್ದಾರ್‌ಗಳು ಹಾಗೂ ತಾ.ಪಂ.ಕಾರ್ಯ ನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.