ಹಾವೇರಿ: ಜಿಲ್ಲೆಯಲ್ಲಿ ಸೆ.24ರಿಂದ ನ.23ರವರೆಗೆ ‘ತಂಬಾಕು ಮುಕ್ತ ಯುವ ಅಭಿಯಾನ 2.0’ ಆರಂಭವಾಗಲಿದೆ. ಈ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ತಂಬಾಕು ಮುಕ್ತ ಯುವ ಅಭಿಯಾನ 2.0 ಕಾರ್ಯಕ್ರಮದ ಅನುಷ್ಠಾನ ಕುರಿತ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಸ್ ನಿಲ್ದಾಣ, ಆಸ್ಪತ್ರೆಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಕಾರ್ಯಕ್ರಮ ಆಯೋಜನೆ ಮೂಲಕ ಧೂಮಪಾನ ಹಾಗೂ ಗುಟಕಾ ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯ ವಿವಿಧ 60 ಶಾಲೆಗಳಲ್ಲಿ 60 ದಿನಗಳ ಕಾಲ ನಿರಂತರ ಪಥ ಸಂಚಲನದ ಮೂಲಕ ಸಾರ್ವಜನಿಕರಿಗೆ ಕೋಟ್ಪಾ ಕಾಯ್ದೆ-2003 ಮತ್ತು ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಕುರಿತು ಜಾಗೃತಿ ಮೂಡಿಸಬೇಕು. ತಂಬಾಕು ಮುಕ್ತ ಗ್ರಾಮ, ತಂಬಾಕು ಮುಕ್ತ ಕಚೇರಿ ಹಾಗೂ ತಂಬಾಕು ಮುಕ್ತ ಶಾಲೆ ಘೋಷಣೆ ಮಾಡಲು ಶ್ರಮಿಸಬೇಕು ಎಂದು ತಿಳಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಕಂಡುಬಂದಲ್ಲಿ ದಂಡ ವಿಧಿಸಬೇಕು. ಸಾರ್ವಜನಿಕ ಸ್ಥಳಗಳಿಗೆ ಅನಿರೀಕ್ಷಿತ ದಾಳಿ ನಡೆಸಬೇಕು. ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು ಹಾಗೂ ವ್ಯಸನಿಗಳನ್ನು ವ್ಯಸನ ಮುಕ್ತರನ್ನಾಗಿ ಮಾಡಲು ಎಲ್ಲರೂ ಕೈಜೋಡಿಸಬೇಕು ಎಂದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಡಾ.ಸಂತೋಷ ದಡ್ಡಿ ಮಾತನಾಡಿ, ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಶಾಲಾ-ಕಾಲೇಜು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿವಿಧ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಲು ಯೋಜಿಸಲಾಗಿದೆ ಎಂದರು.
ಸಭೆಯಲ್ಲಿ ಡಿಡಿಪಿಯು ಡಾ.ಎಚ್.ಉಮೇಶಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ, ಡಾ.ಜಗದೀಶ ಪಾಟೀಲ, ಹಾವೇರಿ ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ವಿವಿಧ ತಾಲೂಕುಗಳ ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.