ಜಿಲ್ಲೆ

ಜೂನ್ 4ರಂದು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ; ಲೋಕಸಭಾ ಚುನಾವಣೆ ಫಲಿತಾಂಶ ಹಿನ್ನೆಲೆ, ಡಿಸಿ ಆದೇಶ

ಹಾವೇರಿ: ಲೋಕಸಭಾ ಚುನಾವಣೆ-2024ರ ಮತ ಎಣಿಕೆ ಕಾರ್ಯ ಜಿಲ್ಲೆಯಲ್ಲಿ ಜೂನ್ 4ರಂದು ಜರುಗಲಿದ್ದು, ಅಂದು ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಜೂನ್ 3ರ ಸಂಜೆ 6 ಗಂಟೆಯಿಂದ ಜೂನ್ 5ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಘುನಂದನ ಮೂರ್ತಿ ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡಿ ಓಡಾಡುವುದನ್ನು, ಜೀವಕ್ಕೆ ಹಾನಿಯನ್ನುಂಟು ಮಾಡುವ ಮಾರಕಾಸ್ತ್ರಗಳು, ಇತ್ಯಾದಿ ಅಪಾಯಕಾರಿ ವಸ್ತು ಹಿಡಿದುಕೊಂಡು ಓಡಾಡುವುದು, ಸ್ಫೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಜತೆಗೆ ಇಟ್ಟುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ಹಾಗೂ ಯಾವುದೇ ಸಭೆ-ಸಮಾರಂಭ ಅಥವಾ ಮೆರವಣಿಗೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.
ಈ ಆದೇಶವು ಶವ ಸಂಸ್ಕಾರ, ಮದುವೆ ಹಾಗೂ ಧಾರ್ಮಿಕ ಸಭೆ ಸಮಾರಂಭಗಳಿಗೆ ಅನ್ವಯಿಸುವುದಿಲ್ಲ. ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಿದ್ದಾರೆಂದು ಪ್ರಕಟಣೆ ತಿಳಿಸಿದೆ.