ಜಿಲ್ಲೆ

ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಶೂನ್ಯವಾಗಬೇಕು; ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ

ಹಾವೇರಿ: ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಶೂನ್ಯವಾಗಬೇಕು. ಈ ನಿಟ್ಟಿನಲ್ಲಿ ಎಲ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಸಕ್ರೀಯವಾಗಿ ಕೆಲಸ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ಜನಜಾಗೃತಿ ಜಾಥಾಗಳ ಮೂಲಕ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ಥಳೀಯವಾಗಿ ಕೆಲಸ ಮಾಡುವ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಬಾಲ್ಯ ವಿವಾಹ ತಡೆಯುವ ಕೆಲಸವನ್ನು ತುಂಬಾ ಜವಾಬ್ದಾರಿಯಿಂದ ನಿಭಾಯಿಸಬೇಕು ಎಂದರು.
ಮಕ್ಕಳ ಸಾಗಣೆ ಮತ್ತು ಮಹಿಳೆಯ ದೌರ್ಜನ್ಯ ನಡೆಯದಂತೆ ಸ್ಥಳೀಯವಾಗಿ ಕಾವಲು ಸಮಿತಿಗಳು ಗಮನಹರಿಸಬೇಕು. ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರಿಗೆ ಅಧಿಕಾರಿಗಳು ಸೂಕ್ತ ಮಾರ್ಗದರ್ಶನ ನೀಡಿ ಇಂತಹ ಪ್ರಕರಣಗಳು ಜಿಲ್ಲೆಯಲ್ಲಿ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ ಮಾತನಾಡಿ, ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಪೋನ್ ನೀಡಲಾಗಿದೆ. ಪ್ರತಿಯೊಂದು ಮಗುವಿನ ಮಾಹಿತಿಯನ್ನು ಪೋಷಣ ಟ್ರ್ಯಾಕರ್‌ನಲ್ಲಿ ಅಳವಡಿಸಾಗುತ್ತಿದೆ. ಅಪೌಷ್ಠಿಕ ಮಕ್ಕಳ ಬಗ್ಗೆ ಹೆಚ್ಚಿನ ಒತ್ತು ಕೊಟ್ಟು ಅಪೌಷ್ಠಿಕತೆ ಹೋಗಾಡಿಸಲು ಕೆಲಸ ಮಾಡುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಆರ್.ಮುತಾಲಿಕದೇಸಾಯಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಮಕ್ಕಳ ಗ್ರಾಮ ಸಭೆ ಕಡ್ಡಾಯ:
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಕ್ಕಳ ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ಆಯೋಜಿಸಬೇಕು. ಬಾಲ್ಯ ವಿವಾಹ ನಿಷೇಧದ ಕುರಿತು ಮಾಹಿತಿ ನೀಡಬೇಕು. ಎಲ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಕಾವಲು ಸಮಿತಿಯ ಜತೆಗೆ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಸಿಸಿ ಕ್ಯಾಮರಾ ಕಡ್ಡಾಯ:
ಜಿಲ್ಲೆಯಲ್ಲಿರುವ ಬಾಲಕಿಯರ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರ ಮತ್ತು ವಸತಿ ಸೌಕರ್ಯ ಕಲ್ಪಿಸುವ ಜತೆಗೆ ಅವರಿಗೆ ಯಾವುದೇ ತೊಂದರೆಯಾಗದಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಮತ್ತು ಸಿಸಿಟಿವಿ ಕ್ಯಾಮರಾ ಕಡ್ಡಾಯವಾಗಿ ಅಳವಡಿಸಬೇಕು ಎಂದರು.
ಕ್ರಿಯಾಶೀಲರಾಗಿ ಕೆಲಸ ಮಾಡಿ:
ಸಖಿ ಒನ್ ಸ್ಟಾಪ್ ಸೆಂಟರ್ ಸಿಬ್ಬಂದಿ ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಮತ್ತು ಪ್ರಕರಣಗಳ ಸ್ಥಿಗತಿಗಳನ್ನು ಸಂಬಂಧಪಟ್ಟ ಇಲಾಖೆಯವರ ಜತೆಗೆ ಚರ್ಚಿಸಿ ನಿರಂತರವಾಗಿ ಅನುಪಾಲನೆ ಮಾಡಬೇಕು ಎಂದು ಡಿಸಿ ಸೂಚನೆ ನೀಡಿದರು.