ಹಾವೇರಿ: ತಾಲೂಕಿನ 20 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆಗಳಲ್ಲಿ ಗುರುವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಅಕ್ಷರ ಫೌಂಡೇಶನ್, ಗ್ರಾಮ ಪಂಚಾಯಿತಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿಗಳ ಸಹಯೋಗದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಗಣಿತ ಸ್ಪರ್ಧೆ ಆಯೋಜಿಸಲಾಗಿತ್ತು.
ಸ್ಪರ್ಧೆಯಲ್ಲಿ ನಾಲ್ಕು, ಐದು ಮತ್ತು ಆರನೇ ತರಗತಿಯ ವಿದ್ಯಾರ್ಥಿಗಳು ಹಾಜರಾಗಿದ್ದರು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಸಿಆರ್‌ಪಿ, ಬಿಆರ್‌ಪಿ ಅವರನ್ನು ಪರೀಕ್ಷಾ ಕೇಂದ್ರದ ನೋಡಲ್ ಆಗಿ ನೇಮಿಸಲಾಗಿತ್ತು. ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರದ ಶಾಲೆಯ ಮುಖ್ಯೋಪಾಧ್ಯಾಯರು ಮುಖ್ಯ ಅಧೀಕ್ಷಕರಾಗಿ ಕಾರ್ಯನಿರ್ವಹಿಸಿದರು. ತಾಲೂಕಿನ ನಾಲ್ಕನೇ ತರಗತಿಯ 1,140 ವಿದ್ಯಾರ್ಥಿಗಳು, 5ನೇ ತರಗತಿಯ 1,135 ವಿದ್ಯಾರ್ಥಿಗಳು ಹಾಗೂ 6ನೇ ತರಗತಿಯ 1,136 ವಿದ್ಯಾರ್ಥಿಗಳು ಸೇರಿ ಒಟ್ಟು 3,411 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ತಾಲೂಕಿನಾದ್ಯಂತ 20 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಉದ್ಘಾಟನಾ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮಗಳಲ್ಲಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು, ಮೇಲುಸ್ತುವಾರಿ ಅಧಿಕಾರಿಗಳು, ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಪಂಚಾಯಿತಿಯ ಪಿಡಿಒ ಮತ್ತು ಇತರ ಅಧಿಕಾರಿಗಳು, ಶಾಲೆಯ ಮುಖ್ಯ ಗುರುಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಇತರರು ಪಾಲ್ಗೊಂಡಿದ್ದರು.