Oplus_131072 
ಜಿಲ್ಲೆ

ಕನಿಷ್ಠ ವೇತನ 31 ಸಾವಿರ ರೂ. ನೀಡಲು ಆಗ್ರಹ; ಹಾಸ್ಟೆಲ್, ವಸತಿ ಶಾಲೆಗಳ ಹೊರಗುತ್ತಿಗೆ ನೌಕರರ ಮನವಿ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ರಾಜ್ಯದ ವಿವಿಧ ಇಲಾಖೆಗಳಡಿಯಿರುವ ಹಾಸ್ಟೆಲ್ ಹಾಗೂ ವಸತಿ ಶಾಲೆ-ಕಾಲೇಜ್‌ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಮಾಸಿಕ 31 ಸಾವಿರ ರೂ. ಕನಿಷ್ಠ ವೇತನ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘಟನೆ ರಾಜ್ಯ ಸರಕಾರವನ್ನು ಒತ್ತಾಯಿಸಿದೆ.

ನಗರದ ಹೊರವಲಯದಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಅಪರ ಜಿಲ್ಲಾಧಿಕಾರಿ ಡಾ.ಎಲ್.ನಾಗರಾಜ ಅವರ ಮೂಲಕ ಮುಖ್ಯಮಂತ್ರಿಯವರಿಗೆ ಸಲ್ಲಿಸಿದ ಮನವಿಯಲ್ಲಿ, ಕಳೆದ 15, 20 ವರ್ಷಗಳಿಂದ ಕಡಿಮೆ ಸಂಬಳಕ್ಕೆ ವಸತಿ ನಿಲಯ-ಶಾಲಾ ಕಾಲೇಜ್‌ಗಳಲ್ಲಿ ಕೆಲಸ ಮಾಡುತ್ತಿರುವ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಡಿ ಗ್ರೂಪ್ ಅಟೆಂಡರ್, ಕಂಪ್ಯೂಟರ್ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್‌ಗಳು, ಹೊರಗುತ್ತಿಗೆ ಶಿಕ್ಷಕರು, ದಿನಗೂಲಿ ನೌಕರರು ಯಾವುದೇ ಭದ್ರತೆ ಇಲ್ಲದೆ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರು ಸಾಕಷ್ಟು ಶೋಷಣೆಯನ್ನು ಅನುಭವಿಸುತ್ತಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಹಾಸ್ಟೇಲ್ ನೌಕರರಿಗೆ ಹೊರಗುತ್ತಿಗೆ ಬದಲಾಗಿ ನೇರವಾಗಿ ಇಲಾಖೆಯಿಂದ ವೇತನ ಕೊಡಬೇಕು. ನಿವೃತ್ತಿವರೆಗೆ ಸೇವಾಭದ್ರತೆ ಕೊಡಬೇಕು. ಕಾರ್ಮಿಕ ಕಾನೂನು ಪ್ರಕಾರ ಕಡ್ಡಾಯವಾಗಿ ವಾರಕ್ಕೆ ಒಂದು ರಜೆ ಕೊಡಬೇಕು. ಕೆಲಸದ ಸಮಯ ನಿಗಧಿ ಆಗಬೇಕು.

ಬೀದರ್ ಜಿಲ್ಲೆಯ ಮಾದರಿಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘವನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಬೇಕು. ಗುತ್ತಿಗೆದಾರರು ಸಂಬಳದ ಚೀಟಿ, ನೇಮಕಾತಿ ಆದೇಶ ಪತ್ರ, ಐ.ಡಿ ಕಾರ್ಡ್, ಸರ್ವಿಸ್ ಸರ್ಟಿಫಿಕೇಟ್ ಮತ್ತು ಹಣ ತುಂಬಿದ ರಸೀದಿ ಕೊಡಬೇಕು. ಹಿಂದುಳಿದ ವರ್ಗ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿಗಳ ಸಂಖ್ಯೆ ಕಡಿತ ಮಾಡಿರುವ ಆದೇಶ ರದ್ದಾಗಬೇಕು. 50 ವಿದ್ಯಾರ್ಥಿಗಳಿಗೆ 3 ಜನ ಸಿಬ್ಬಂದಿಯಂತೆ ಹಿಂದಿನ ಪದ್ಧತಿ ಮುಂದುವರಿಸಬೇಕು. ಪ್ರತಿ ತಿಂಗಳು 5ನೇ ತಾರೀಖು ಸಂಬಳ ಕೊಡಬೇಕು. ಬಾಕಿ ಇರುವ ಸಂಬಳವನ್ನು ತಕ್ಷಣ ಪಾವತಿ ಮಾಡಬೇಕು. 10 ವರ್ಷ ಸೇವೆ ಸಲ್ಲಿಸಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅಡಿಯಲ್ಲಿ ಎಲ್ಲರನ್ನೂ ತರಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಪ್ರಮುಖರಾದ ಶಾಂತಾ ಗಡ್ಡಿಯವರ, ಎಚ್.ಎಚ್. ನಧಾಪ, ಶಿವರಾಜಕುಮಾರ ಹಿತ್ಲರ, ಶೋಭಾ ಡೊಳ್ಳೇಶ್ವರ, ಮಂಜುನಾಥ ಇಂಗಳಗಿ, ಪುಟ್ಟಮ್ಮ ಧೂಳಿಕೊಪ್ಪ, ವಿನೋದಾ ಕಾಗೇರ, ಯಲ್ಲಪ್ಪ ಹರಿಜನ, ಸುಜಾತಾ ಆರೇಗೊಪ್ಪ ಇದ್ದರು.