ಜಿಲ್ಲೆ

ಹಾಸ್ಟೆಲ್ ಹೊರಗುತ್ತಿಗೆ ಜೀತ ಪದ್ಧತಿ ಕೈಬಿಡಿ; ನೌಕರರ ಸಂಘದಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ನಗರದ ಹೊರವಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬುಧವಾರ ವಿದ್ಯಾರ್ಥಿ ನಿಲಯದ ಹೊರಗುತ್ತಿಗೆ ಸಿಬ್ಬಂದಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ ಶ್ರೀಧರ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಸಂಘದ ಸಂಸ್ಥಾಪಕ ಅಧ್ಯಕ್ಷ ನಿತ್ಯಾನಂದ ಸ್ವಾಮಿ ಮಾತನಾಡಿ, ವಿದ್ಯಾರ್ಥಿ ನಿಲಯಗಳಲ್ಲಿ ಹತ್ತು, ಹದಿನೈದು ವರ್ಷಗಳಿಂದ ಅಡುಗೆಯವರು, ಅಡುಗೆ ಸಹಾಯಕರು, ಕಾವಲುಗಾರು, ಸ್ವಚ್ಛತಾಗಾರರು, ಜವಾನರು, ನರ್ಸ್‌ಗಳು, ಡಿ.ಗ್ರೂಪ್ ನೌಕರರು ಕೆಲಸ ಮಾಡುತ್ತಿದ್ದಾರೆ. ಆದರೆ, ಇವರಿಗೆ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ. ಈ ಹೊರಗುತ್ತಿಗೆ ಜೀತ ಪದ್ಧತಿ ಕೈಬಿಟ್ಟು, ಖಾಯಂ ನೌಕರರನ್ನಾಗಿ ನೇಮಿಸಿ ಎಂದರು.
ಬಾಕಿ ಇರುವ ಸಂಬಳವನ್ನು ತಕ್ಷಣ ಕೊಡಬೇಕು. ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ 4 ಇಲಾಖೆಯ ಅಧಿಕಾರಿಗಳ ಜಂಟಿ ಸಭೆ ಕರೆದು ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ಮಾತನಾಡಿ, ಸಿ ಮತ್ತು ಡಿ ವರ್ಗದ ಹೊರಗುತ್ತಿಗೆ ಸಿಬ್ಬಂದಿಗೆ ನಿವೃತ್ತಿವರೆಗೆ ಸೇವಾ ಭದ್ರತೆ ಕೊಡಬೇಕು. ನೇರವಾಗಿ ಇಲಾಖೆಯಿಂದ ಮಾಸಿಕ ವೇತನವನ್ನು ಬ್ಯಾಂಕ್ ಖಾತೆಗೆ ಹಾಕಬೇಕು. ಕಾರ್ಮಿಕ ಇಲಾಖೆಯ ಆದೇಶದಂತೆ ಕನಿಷ್ಠ ವೇತನ ಕೊಡಬೇಕು, ಕಾನೂನು ಪ್ರಕಾರ ವಾರದ ರಜೆ, ಹಬ್ಬಗಳ ರಜೆ, ಸಂಬಳದ ಚೀಟಿ ಒದಗಿಸಬೇಕು ಎಂದು ಆಗ್ರಹಿಸಿದರು.
ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ರಾಜ್ಯ ಜಂಟಿ ಕಾರ್ಯದರ್ಶಿ ಹುಲಗಪ್ಪ ಚಲವಾದಿ, ಎಚ್.ಎಚ್.ನದಾಫ್, ಶಿವರಾಜ ಮಾರನಬೀಡಾ, ಶಾಂತಕ್ಕ ಗಡ್ಡಿಯವರ, ಶೋಭಾ ಸಿ., ಡೊಳ್ಳೇಶ್ವರ, ಸುನೀತಾ ಎಚ್, ಶಂಭುಲಿಂಗ ಆರ್, ಲಿಂಗರಾಜ ರಾಣೆಬೆನ್ನೂರ, ಎಸ್‌ಎಫ್‌ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಎಸ್., ಅರುಣ ಕಡಕೋಳ, ಇತರರಿದ್ದರು.