ಹಾವೇರಿ: ಆಲದಕಟ್ಟಿ ಗ್ರಾಮದಲ್ಲಿ ಸಂಭವಿಸಿದ ಪಟಾಕಿ ಅಗ್ನಿ ಅವಘಡದಲ್ಲಿ ಮೃತಪಟ್ಟ ಕಾಟೇನಹಳ್ಳಿ ಗ್ರಾಮದ ಮೃತರ ಮನೆಗಳಿಗೆ ಹಿರಿಯ ದಿವಾಣಿ ನ್ಯಾಯದೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಶುಕ್ರವಾರ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಅಧಿಕಾರಿಗಳೊಂದಿಗೆ ಕಾಟೇನಹಳ್ಳಿ ಗ್ರಾಮಕ್ಕೆ ತೆರಳಿ, ಅಗ್ನಿ ಅವಘಡದಲ್ಲಿ ಮೃತಪಟ್ಟ ಶಿವಲಿಂಗ ಅಕ್ಕಿ, ರಮೇಶ ಬಾರ್ಕಿ ಹಾಗೂ ದ್ಯಾಮಣ್ಣ ಓಲೇಕಾರ ಅವರ ಮನೆಗಳಿಗೆ ಭೇಟಿ ನೀಡಿ, ಕುಟುಂಬದವರಿಂದ ಘಟನೆ ಕುರಿತು ಮಾಹಿತಿ ಪಡೆದು, ಸಾಂತ್ವನ ಹೇಳಿದರು.
ಇಂತಹ ಘಟನೆಗಳಿಂದ ಸಂತ್ರಸ್ತ ಕುಟುಂಬಗಳಿಗೆ ದೊರೆಯುವ ಪರಿಹಾರ ಒದಗಿಸಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಪನೆಲ್ ವಕೀಲರನ್ನು ನೇಮಿಸಲಾಗುವುದು. ಕಾನೂನಾತ್ಮಕ ಚೌಕಟ್ಟಿನಲ್ಲಿ ದೊರೆಯಬಹುದಾದ ಪರಿಹಾರ ಕೊಡಿಸಲು ಪ್ರಯತ್ನಿಸಲಾಗುವುದು ಎಂದರು.
ಈಗಾಗಲೇ ಮುಖ್ಯಮಂತ್ರಿಯವರು ತಲಾ ಐದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಸರ್ಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಸಂತ್ರಸ್ತ ಕುಟುಂಬಗಳಿಗೆ ದೊರೆಯಲಿದೆ ಎಂದು ಭರವಸೆ ನೀಡಿದರು.
ಮೃತ ಶಿವಲಿಂಗ ಅಕ್ಕಿ ತಂದೆ ಶಿವಸಬಪ್ಪ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿರುವುದನ್ನು ಗಮನಿಸಿದ ನ್ಯಾಯಾಧೀಶರು ಕೂಡಲೇ ಅವರಿಗೆ ವಿಕಲಚೇತನ ಮಾಶಾಸನ ಸೌಲಭ್ಯ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಹಾವೇರಿ ತಹಶೀಲ್ದಾರ್ ಶಂಕರ ಜಿ., ಪೊಲೀಸ್ ನಿರೀಕ್ಷಕ ರವಿಕುಮಾರ ಡಿ., ಕಾಟೇನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕವಿತಾ, ಗ್ರಾಮ ಲೆಕ್ಕಾಧಿಕಾರಿ ಮಹೇಶ, ಇತರರಿದ್ದರು.