ಹಾವೇರಿ: ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜತೆಗೆ ತಮ್ಮ ಹಕ್ಕುಗಳು ಮತ್ತು ಕಾನೂನು ಅರಿವು ಹೊಂದುವುದು ಅತ್ಯಗತ್ಯವಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಹೇಳಿದರು.
ಸವಣೂರ ತಾಲೂಕು ಹತ್ತಿಮತ್ತೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ನ್ಯಾಯವಾದಿಗಳ ಸಂಘ, ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಮಾನವ ಕಳ್ಳ ಸಾಗಣೆ ತಡೆ, ಪೋಕ್ಸೋ ಕಾಯ್ದೆ ಹಾಗೂ ಮಕ್ಕಳ ಹಕ್ಕುಗಳ ಕುರಿತ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಕಾನೂನು ಉಲ್ಲಂಘನೆಯಾದಾಗ ಹಾಗೂ ಅಶಾಂತಿ ವಾತಾವರಣ ಉಂಟಾದಾಗ ವಿದ್ಯಾರ್ಥಿಗಳು ಕಾನೂನು ಪಾಲಿಸಿ ಸಾಮಾಜಿಕ ಬದಲಾವಣೆಗೆ ಕಾರಣರಾಗಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಮಹಾಂತೇಶ ಬಸವನಾಯ್ಕ ಮಕ್ಕಳ ಕಳ್ಳ ಸಾಗಾಣಿಕೆ ತಡೆ ಕುರಿತು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನೆಲ್ ವಕೀಲ ಆರ್.ಐ.ಚನ್ನಪಟ್ಟಣ ಪೋಕ್ಸೋ ಕಾಯ್ದೆ ಮತ್ತು ಮಕ್ಕಳ ಹಕ್ಕುಗಳ ಕುರಿತು ಹಾಗೂ ಎನ್.ಎನ್.ಡಿಳ್ಳೆಪ್ಪನವರ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಕುರಿತು ಉಪನ್ಯಾಸ ನೀಡಿದರು.
ಶಾಲೆಯ ಮುಖ್ಯೋಪಾಧ್ಯಾಯ ಸತೀಶ ಎಂ.ಎನ್. ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ.ಸಿ. ಅಧ್ಯಕ್ಷ ಮುಸ್ತಾಕ್‌ಅಲಿ ಬೂದಿಹಾಳ, ಮತ್ತಿತರರು ಉಪಸ್ಥಿತರಿದ್ದರು.