ಜಿಲ್ಲೆ

ಕೆಪಿಎಸ್‌ಸಿ ವಿವಿಧ ಹುದ್ದೆಗಳ ಪರೀಕ್ಷೆ 29ರಂದು; ಹಾವೇರಿ ನಗರದ 4 ಕೇಂದ್ರಗಳಲ್ಲಿ ಆಯೋಜನೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದಿಂದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಗ್ರೂಪ್ ಎ ಮತ್ತು ಬಿ ವೃಂದದ 384 ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ ಡಿ.29ರಂದು ನಗರದ 4 ಕೇಂದ್ರಗಳಲ್ಲಿ ನಡೆಯಲಿದೆ. ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ಎಲ್.ನಾಗರಾಜ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗುರುವಾರ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಡಿ.29ರಂದು ನಗರದ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 10ರಿಂದ 12 ಹಾಗೂ ಮಧ್ಯಾಹ್ನ 2ರಿಂದ 4 ಗಂಟೆವರೆಗೆ ಎರಡು ಹಂತದಲ್ಲಿ ಪರೀಕ್ಷೆ ನಡೆಯಲಿದೆ ಎಂದರು.

ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ವಿವಿಧ ಇಲಾಖೆ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಹಾಗೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿಗಳು, ಉಪನ್ಯಾಸಕರು ಪರೀಕ್ಷಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರದ ಹೊರ ವಲಯ ಹಾಗೂ ಕೊಠಡಿಯ ಒಳಗೆ ಶಿಸ್ತುಬದ್ಧವಾಗಿ ಪರೀಕ್ಷಾ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಸಬೇಕು ಎಂದು ನಿರ್ದೇಶಿಸಿದರು.

ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್‌ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ನಿಷೇಧಿತ ವಲಯದಲ್ಲಿ ಝರಾಕ್ಸ್ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಲು ಆದೇಶಿಸಲಾಗಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೂಲ ಪರೀಕ್ಷಾ ಪ್ರವೇಶ ಪತ್ರ ಹಾಗೂ ಐಡಿ ಕಾರ್ಡ್ ತರಬೇಕು ಎಂದರು.

ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಎಚ್.ಉಮೇಶಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಸಿಸಿಟಿವಿ ಕಡ್ಡಾಯ:

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ, ಜಾಮರ್ ಅಳವಡಿಕೆ ಮಾಡಬೇಕು. ಮೊಬೈಲ್, ಬ್ಲೂಟೂತ್, ಪೇಜರ್, ವೈರಲೆಸ್ ಸೆಟ್ ಹಾಗೂ ರಿಸ್ಟ್ ವಾಚ್‌ಗಳನ್ನು ನಿಷೇಧಿಸಿದೆ. ಉದ್ದ ತೋಳಿನ ಶರ್ಟ್, ಟಿ ಶರ್ಟ್, ಪದರುಗಳುಳ್ಳ ವಿವಿಧ ರೀತಿಯ ವಿನ್ಯಾಸವುಳ್ಳ ವಸ್ತ್ರಗಳು, ಶೂ ಮತ್ತು ಸಾಕ್ಸ್ ನಿಷೇಧಿಸಿದೆ.

ಪರೀಕ್ಷಾ ಕೇಂದ್ರಗಳು:

ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್, ಹಾವೇರಿ ನಗರದ ಜಿ.ಎಚ್.ಕಾಲೇಜ್, ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜ್, ಇಜಾರಿಲಕಮಾಪುರ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.