ಹಾವೇರಿ: ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಆರ್‌ಪಿಸಿ ಹುದ್ದೆಗಳಿಗೆ ಸೆ.14 ಮತ್ತು 15ರಂದು ನಗರದ ಎಂಟು ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ. ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು ಎಂದು ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಆರ್‌ಪಿಸಿ ಹುದ್ದೆಗಳ ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿದರು. ಈ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿಗಳು, ಉಪನ್ಯಾಸಕರು ಪರೀಕ್ಷಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರದ ಹೊರ ವಲಯ ಹಾಗೂ ಕೊಠಡಿಯ ಒಳಗೆ ಶಿಸ್ತುಬದ್ಧವಾಗಿ ಪರೀಕ್ಷಾ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಸಬೇಕು ಎಂದು ಹೇಳಿದರು.
ಸೆ.14ರಂದು ಮಧ್ಯಾಹ್ನ 2 ಗಂಟೆಗೆ ಹಾಗೂ ಸೆ.15ರಂದು ಬೆಳಗ್ಗೆ 10ರಿಂದ 12 ಗಂಟೆವರೆಗೆ ಹಾಗೂ ಮಧ್ಯಾಹ್ನ 2ರಿಂದ 4 ಗಂಟೆವರೆಗೆ ಎರಡು ಹಂತದಲ್ಲಿ ಪರೀಕ್ಷೆ ನಡೆಯಲಿದೆ. ಸೆ.14ರಂದು 3,031 ಅಭ್ಯರ್ಥಿಗಳು ಹಾಗೂ ಸೆ.15ರಂದು ಬೆಳಗಿನ ಅವಧಿಯಲ್ಲಿ 3,627 ಹಾಗೂ ಮಧ್ಯಾಹ್ನ ಅವಧಿಯಲ್ಲಿ 3,386 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್‌ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಅಂಚೆ ಕಚೇರಿ ಅಧಿಕಾರಿಗಳು, ಎಲ್ಲ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಇಲೆಕ್ಟ್ರಾನಿಕ್ ಉಪಕರಣಗಳ ನಿಷೇಧ:
ಪರೀಕ್ಷಾರ್ಥಿಗಳು ಅಥವಾ ಕೊಠಡಿಯ ಮೇಲ್ವಿಚಾರಕರು ಪರೀಕ್ಷಾ ಕೇಂದ್ರದೊಳಗೆ ಅತ್ಯಾಧುನಿಕ ಇಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಪೇಜರ್, ವೈರಲೆಸ್ ಸೆಟ್ ಹಾಗೂ ರಿಸ್ಟ್ ವಾಚ್‌ಗಳನ್ನು ನಿಷೇಧಿಸಿದೆ.
ವಸ್ತ್ರ ಸಂಹಿತೆ:
ಪರೀಕ್ಷಾರ್ಥಿಗಳು ಉದ್ದ ತೋಳಿನ ಶರ್ಟ್, ಟಿ ಶರ್ಟ್, ಪದರುಗಳುಳ್ಳ ವಿವಿಧ ರೀತಿಯ ವಿನ್ಯಾಸವುಳ್ಳ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಿದೆ. ಸರಳ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಮಂಗಳ ಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಬೇರೆ ರೀತಿಯ ಆಭರಣಗಳನ್ನು ಧರಿಸುವಂತಿಲ್ಲ. ಶೂ, ಸಾಕ್ಸ್ ಬದಲು ಸರಳ ಚಪ್ಪಲಿ ಧರಿಸಬೇಕು ಎಂದರು ಎಡಿಸಿ.
ಎಂಟು ಪರೀಕ್ಷಾ ಕೇಂದ್ರಗಳು
ಹಾವೇರಿ ನಗರದ ಕೆಎಲ್‌ಇ ಜಿ.ಎಚ್. ಪದವಿಪೂರ್ವ ಕಾಲೇಜ್, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜ್, ಎಸ್‌ಜಿಎಸ್‌ಎಲ್‌ಪಿ ಬಾಲಕಿಯರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್, ಎಸ್.ಎಂ.ಎಸ್. ಹೈಸ್ಕೂಲ್, ಮುನ್ಸಿಪಲ್ ಹೈಸ್ಕೂಲ್, ಸರ್ಕಾರಿ ಪದವಿ ಪೂರ್ವ ಕಾಲೇಜ್, ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಹಾಗೂ ಕೆರಿಮತ್ತಿಹಳ್ಳಿ ಹಾವೇರಿ ವಿಶ್ವವಿದ್ಯಾಲಯದಲ್ಲಿ ಪರೀಕ್ಷಾ ಕೇಂದಗಳನ್ನು ಗುರುತಿಸಲಾಗಿದೆ.
ಸಿಸಿಟಿವಿ ಕ್ಯಾಮರಾ ಕಡ್ಡಾಯ
ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ, ಜಾಮರ್ ಅಳವಡಿಕೆ ಹಾಗೂ ಕೊಠಡಿಯೊಳಗೆ ಗಡಿಯಾರ ಕಡ್ಡಾಯವಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಪರೀಕ್ಷಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಸೂಕ್ತ ಪೀಠೋಪಕರಣ ಒಳಗೊಂಡಂತೆ ಮೂಲ ಸೌಕರ್ಯ ಒದಗಿಸಬೇಕು. ಸಿಸಿಟಿವಿ ಕ್ಯಾಮರಾ ಕಣ್ಗಾವಲಿನಲ್ಲೇ ಪ್ರಶ್ನೆಪತ್ರಿಕೆ ತೆರೆಯಬೇಕು ಹಾಗೂ ಉತ್ತರ ಪತ್ರಿಕೆ ಬಂಡಲ್ ಮಾಡಬೇಕು ಎಂದು ಎಡಿಸಿ ವೀರಮಲ್ಲಪ್ಪ ಸೂಚಿಸಿದರು.