ಹಾವೇರಿ: ಜಿಲ್ಲೆಯಲ್ಲಿ ಸತತ ಮಳೆಯಿಂದ ಪ್ರವಾಹ ಉಂಟಾಗಿದ್ದು, ಸಾಕಷ್ಟು ಪ್ರಮಾಣದಲ್ಲಿ ಬೆಳೆಹಾನಿ ಸಂಭವಿಸಿದೆ. ಸಂಬಂಧಪಟ್ಟ ಅಧಿಕಾರಿಗಳು ಬೆಳೆನಷ್ಟ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಬೆಳೆ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಸೂಚಿಸಿದರು.
ನಗರದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ಬೆಳೆಹಾನಿ, ಮನೆ, ಜಾನುವಾರುಗಳ ಹಾನಿ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕಿನದ್ಯಾಂತ ಮಳೆಯಿಂದಾಗಿ ನೆರೆ ಸಂಭವಿಸಿ ಸುಮಾರು 1,396 ಹೆಕ್ಟೆರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ತೋಟಗಾರಿಕೆ ಬೆಳೆಗಳಲ್ಲಿ ಪ್ರತಿಶತ ಶೇ.90ರಷ್ಟು ಬೆಳೆ ಹಾನಿಯಾಗಿರುತ್ತದೆ. ಸಂಬಂಧಪಟ್ಟ ಅಧಿಕಾರಗಳು ಬೆಳೆ ಹಾನಿ ಪರಿಶೀಲನೆ ಮಾಡಿ ಬೆಳೆ ಹಾನಿ ಒಳಗಾದವರಿಗೆ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿಯ ಪ್ರಕಾರ ಪರಿಹಾರ ವಿತರಿಸಬೇಕು. ಪರಿಹಾರ ವಿತರಣೆಯಲ್ಲಿ ಯಾವುದೇ ಸಮಸ್ಯೆ ಉಂಟಾಗಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.
ತಾಲೂಕಿನಲ್ಲಿ ಆರಂಭಿಸಿರುವ ಕಾಳಜಿ ಕೇಂದ್ರದಲ್ಲಿ ಯಾವುದೇ ರೀತಿಯ ಕೊರತೆ ಉಂಟಾಗಬಾರದು. ಕಾಳಜಿ ಕೇಂದ್ರದಲ್ಲಿರುವ ಜನರಿಗೆ ಸೂಕ್ತ ಮೂಲ ಸೌಕರ್ಯಗಳನ್ನು ನೀಡಬೇಕು. ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಮತ್ತು ನಿಯೋಜಿಸಿರುವ ಸ್ಥಳದಲ್ಲಿಯೇ ಇರಬೇಕು ಎಂದರು.
ತಹಶೀಲ್ದಾರ್ ಜಿ.ಎಸ್.ಶಂಕರ ಮಾತನಾಡಿ, ತಾಲೂಕಿನಲ್ಲಿ ಈವರೆಗೂ 167 ಮನೆಗಳು ಮಳೆಯಿಂದ ಹಾನಿಗೊಳಗಾಗಿವೆ. ಇವುಗಳನ್ನೂ ಸಮೀಕ್ಷೆ ಮಾಡಿ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿ ಅನ್ವಯ ಕ್ರಮ ವಹಿಸಲಾಗುವುದು ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜೀಗೌಡರ, ಸವಣೂರ ಉಪ ವಿಭಾಗಾಧಿಕಾರಿ ಮಹ್ಮದ್ ಖಿಜರ್, ಕೊಟ್ರೇಶಶಪ್ಪ ಬಸೇಗಣ್ಣಿ, ಎಂ.ಎಂ.ಮೈದೂರ, ಗ್ರಾ.ಪಂ. ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ವರ್ಗಾವಣೆ ಎಚ್ಚರಿಕೆ
ತಹಸೀಲ್ದಾರ್ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿಬಂದಿವೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಮುಂದಿನ ದಿನಗಳಲ್ಲಿ ಪ್ರತಿ ತಿಂಗಳಲ್ಲಿ ಎರಡು ಬಾರಿ ಸಭೆ ನಡೆಸಲಾಗಿವುದು. ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತುರ್ತು ವಿಲೇವಾರಿಗೆ ಕ್ರಮ ವಹಿಸಬೇಕು. ಕಚೇರಿಗೆ ಬಂದಂತಹ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಇಲ್ಲದಿದ್ದರೆ ಅಂತಹ ಸಿಬ್ಬಂದಿ ವರ್ಗಾವಣೆ ಮಾಡಲಾಗುವುದು ಎಂದು ಶಾಸಕ ಲಮಾಣಿ ಎಚ್ಚರಿಕೆ ನೀಡಿದರು.