ಜಿಲ್ಲೆ

ಕ್ಷಣಿಕ ಸುಖಕ್ಕೆ ವ್ಯಸನಕ್ಕೆ ತುತ್ತಾಗದಿರಿ; ಮಾದಕ ವಸ್ತು ಸೇವೆ ಅಪಾಯಕಾರಿ; ಡಾ.ಪಿ.ಆರ್.ಹಾವನೂರ

ಹಾವೇರಿ: ಭಾರತದಲ್ಲಿ ಯುವಕರ ಸಂಖ್ಯೆ ಅಧಿಕವಾಗಿದೆ. ಯಾವುದೇ ಒಂದು ದೇಶದ ಯುವಶಕ್ತಿಯನ್ನು ಹಾಳು ಮಾಡಲು ಮಾದಕ ವಸ್ತುಗಳ ಬಳಕೆ ಒಂದೇ ಸಾಕು. ಈ ಮಾದಕ ವಸ್ತುಗಳ ಸೇವನೆ ಅತ್ಯಂತ ಅಪಾಯಕಾರಿಯಾಗಿದೆ. ಕ್ಷಣಿಕ ಸಂತೋಷಕ್ಕೆ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗಬೇಡಿ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ಆರ್. ಹಾವನೂರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ತಾಲೂಕಿನ ದೇವಗಿರಿ ಸರ್ಕಾರಿ ಇಂಜನಿಯರಿಂಗ್ ಕಾಲೇಜಿನಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಪೊಲೀಸ್ ಇಲಾಖೆ, ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಒಂದು ವರದಿ ಪ್ರಕಾರ ಪಂಜಾಬ ರಾಜ್ಯದಲ್ಲಿ ಮಾದಕ ವಸ್ತುಗಳು ವ್ಯಸನಿಗಳ ಸಂಖ್ಯೆ ಅಧಿಕವಾಗಿದೆ. ಸ್ನೇಹಿತರ ಒತ್ತಾಯ, ದೈಹಿಕ ಹಾಗೂ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಲು ಹೀಗೆ ಅನೇಕ ಕಾರಣಗಳಿಗಾಗಿ ಜನರು ಮಾದಕಗಳ ಮೊರೆ ಹೋಗುತ್ತಿದ್ದಾರೆ. ನಂತರ ಈ ವ್ಯಸನದಿಂದ ಹೊರಬರಲಾರದ ಸ್ಥಿತಿಯಲ್ಲಿ ಬಳಲುತ್ತಿದ್ದಾರೆ ಎಂದು ವಿಷಾಧ ವ್ಯಕ್ತಪಡಿಸಿದರು.
ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಮಾತನಾಡಿ, ಯುವ ಜನತೆ ದೇಶದ ಶಕ್ತಿ, ಹಾಗಾಗಿ, ಯುವ ಸಮೂಹ ಮಾದಕ ವಸ್ತುಗಳ ದುಶ್ಚಟದಿಂದ ದೂರವಿರವಿದ್ದಾಗ ಸದೃಢ ಸಮಾಜ ನಿರ್ಮಾಣ ಸಾಧ್ಯ. ಯುವಜನತೆ ಮಾದಕ ವಸ್ತುಗಳ ದಾಸರಾಗುತ್ತಿರುವುದು ಬಹಳ ವಿಪಯಾರ್ಸದ ಸಂಗತಿಯಾಗಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ ಮಾತನಾಡಿ, ಉತ್ತಮ ಪುಸ್ತಕಗಳ ಓದು ಹಾಗೂ ಕ್ರೀಡೆಗಳಲ್ಲಿ ತೊಡಗುವ ಮೂಲಕ ಉತ್ತಮ ಹವ್ಯಾಸವನ್ನು ರೂಢಿಸಿಕೊಳ್ಳಬೇಕು, ಐಎಎಸ್‌ನಂತಹ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಬೇಕು. ದುಶ್ಚಟಗಳಿಂದ ದೂರವಿಬೇಕು, ನೈತಿಕ ಮತ್ತು ಧಾರ್ಮಿಕ ಚೌಕಟ್ಟಿನಲ್ಲಿ ಬೆಳೆಯಬೇಕು. ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು. ಪಾಲಕರ ಕನಸು ನನಸು ಮಾಡಬೇಕು ಎಂದು ಹೇಳಿದರು.
ಜಿಲ್ಲಾ ಮಾಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ನವೋವೈದ್ಯ ಡಾ.ವಿಜಯಕುಮಾರ ಬಿ. ಮಾತನಾಡಿ, ಜೀವ ನಮ್ಮ ಕೈಯಲ್ಲಿಲ್ಲ, ಆದರೆ, ಜೀವನ ನಮ್ಮ ಕೈಯಲ್ಲಿದೆ. ನಿಮಗೆ ಓದುವ ಅವಕಾಶ ದೊರೆತಿದೆ. ನಿಮ್ಮ ಜೀವನ ರೂಪಿಸಲು ಶಿಕ್ಷಕರು ಹಾಗೂ ಪಾಲಕರಿದ್ದಾರೆ. ಪ್ರತಿದಿನ ಅರ್ಧಗಂಟೆ ವ್ಯಾಯಾಮ ಮಾಡಿದರೆ ದಿನ ಪೂರ್ತಿ ಲವಲವಿಕೆಯಿಂದ ಇರಬಹುದು ಹಾಗೂ ಸದೃಢ ದೇಹ ಹೊಂದಬಹುದು ಎಂದರು.
ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮದ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಕಾಲೇಜು ಪ್ರಾಂಶುಪಾಲ ಡಾ.ಜಗದೀಶ ಕೋರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಪಿ.ಸಿ.ಬಣಕಾರ, ಕಾರ್ಯದರ್ಶಿ ಈಶ್ವರ ನಂದಿ, ಅಬಕಾರಿ ಇಲಾಖೆ ಉಪ ಆಯುಕ್ತೆ ಶೈಲಜಾ.ಟಿ.ವಿ., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ ಪಾಟೀಲ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ನಿಲೇಶ ಎಂ.ಎನ್., ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ಬಸವರಾಜ ಇತರರು ಉಪಸ್ಥಿತರಿದ್ದರು.