ಜಿಲ್ಲೆ

ಅಕ್ರಮ ಮರಳು ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೂಚನೆ

ಹಾವೇರಿ: ಜಿಲ್ಲೆಯಲ್ಲಿ ಹಲವೆಡೆ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ಅವರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಸರ್ಕಾರ ಗುರುತಿಸಿದ್ದ ಮರಳಿನ ಪಾಯಿಂಟ್‌ಗಳ ಗುತ್ತಿಗೆ ಅವಧಿ ಮುಗಿದಿದ್ದರೂ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿದೆ. ಇದನ್ನು ನಿಲ್ಲಿಸುವಂತೆ ಈ ಹಿಂದೆ ಮುಖ್ಯಮಂತ್ರಿಯವರು ಸೂಚಿಸಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿಂದೆ ನಾನು ಕೂಡ ಅಧಿಕಾರಿಗಳ ಸಭೆ ನಡೆಸಿದ ಸಂದರ್ಭದಲ್ಲಿ, ನದಿ ತೀರದಲ್ಲಿ ಮರಳು ತೆಗೆಯುವುದರಿಂದ ತೊಂದರೆಯಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೆ. ಆದರೂ ಅಕ್ರಮ ನಿಂತಿಲ್ಲ. ಈ ಬಗ್ಗೆ ಪರಿಶೀಲಿಸಿ, ಕಠಿಣ ಕ್ರಮ ಕೈಗೊಳ್ಳಿ ಎಂದು ಸಚಿವರು ಪತ್ರದ ಮೂಲಕ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
‘ವಿಜಯವಾಣಿ’ ಪತ್ರಿಕೆ ಗಮನಿಸಿ
ಹಲವು ಬಾರಿ ಸೂಚಿಸಿದ್ದರೂ ಅಕ್ರಮ ಮರಳು ಗಣಿಗಾರಿಕೆ ನಿಂತಿಲ್ಲ. ಈ ಬಗ್ಗೆ ‘ವಿಜಯವಾಣಿ’ ಸರಣಿ ವರದಿ ಪ್ರಕಟಿಸುತ್ತಿದೆ. ಯಾವ ಹಂತದಲ್ಲಿ ಕರ್ತವ್ಯ ಲೋಪವಾಗುತ್ತಿದೆ ಎಂಬುದನ್ನು ಪತ್ತೆ ಹಚ್ಚಿ ಕ್ರಮ ಜರುಗಿಸಿ. ಪತ್ರಿಕೆಯಲ್ಲಿ ಗುರುತಿಸಿರುವ ಅಂಶಗಳನ್ನು ಗಮನಿಸಿ ಅಕ್ರಮ ತಡೆಗಟ್ಟಿ ಎಂದು ಸಚಿವ ಶಿವಾನಂದ ಪಾಟೀಲರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.