ಜಿಲ್ಲೆ

ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಾಲಿನ್ಯ ಹೆಚ್ಚಳ; ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ; ನ್ಯಾಯಾಧೀಶ ಎಂ.ಜಿ ಶಿವಳ್ಳಿ ಹೇಳಿಕೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದ್ದು, ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಪ್ರಭಾರ ಜಿಲ್ಲಾ ವ ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಅಧ್ಯಕ್ಷ ಎಂ.ಜಿ ಶಿವಳ್ಳಿ ಹೇಳಿದರು. ಇಲ್ಲಿನ ಜಿಲ್ಲಾಡಳಿತ ಭವನದ ಎದುರಿನ ಉಪ ವಿಜ್ಞಾನ ಕೇಂದ್ರದಲ್ಲಿ ಗುರುವಾರ ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಪ್ರಾದೇಶಿಕ ಅರಣ್ಯ ವಿಭಾಗ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಹಾಗಾಗಿ, ಸ್ವಯಂಪ್ರೇರಣೆಯಿಂದ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು. ಅದರ ಬದಲಾಗಿ ಬಟ್ಟೆ ಬ್ಯಾಗ್‌ನಂಥ ಪರ್ಯಾಯ ವಸ್ತುಗಳನ್ನು ಬಳಸಬೇಕು. ಈ ಮೂಲಕ ಪರಿಸರದ ಉಳಿವಿಗೆ ಅಳಿಲು ಸೇವೆ ಸಲ್ಲಿಸಬೇಕು ಎಂದು ಸಲಹೆ ನೀಡಿದರು. ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಬ್ದುಲ್ ಅಜೀಜ್ ಶೇಖ್ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಾಧೀಶ ಬಿಪಿನ್ ಎಚ್.ಎಂ., ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎಚ್ ಜತ್ತಿ, ಕಾರ್ಯದರ್ಶಿ ಪಿ.ಎಸ್ ಹೆಬ್ಬಾಳ, ಉಪ ಪರಿಸರ ಅಧಿಕಾರಿ ಲೋಹಿತಕುಮಾರ ಪಿ.ಜೆ., ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಹಾಗೂ ಉಪ ವಿಜ್ಞಾನ ಕೇಂದ್ರದ ಕಾರ್ಯದರ್ಶಿ ಸುರೇಶ ಹುಗ್ಗಿ, ವನ್ಯಜೀವಿ ಪರಿಪಾಲಕಿ ಮಾಧುರಿ ದೇವಧರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಾಥ ಮನೋಹರ ಕಡೋಲ್ಕರ್, ನೋಡಲ್ ಅಧಿಕಾರಿ ಬಸನಗೌಡ ಎಸ್.ಪಾಟೀಲ, ವಲಯ ಅರಣ್ಯಾಧಿಕಾರಿ ಶ್ರೀನಿವಾಸ ಆರ್., ಉಪ ವಿಜ್ಞಾನ ಕೇಂದ್ರದ ಮೇಲ್ವಿಚಾರಕ ಕಿರಣ ಆರ್. ಗರಡಿಮನಿ, ಇತರರು ಉಪಸ್ಥಿತರಿದ್ದರು.