ಜಿಲ್ಲೆ

ನೀತಿಸಂಹಿತೆ ಉಲ್ಲಂಘನೆ ಆಗದಂತೆ ನಿಗಾ ವಹಿಸಿ; ಮುಕ್ತ ಚುನಾವಣೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಸಾಮಾನ್ಯ ವೀಕ್ಷಕ ಕಮಲರಾಮ ಮೀನಾ ಸೂಚನೆ

ಕೇಶವಮೂರ್ತಿ ಬೇಲೂರಪ್ಪನವರ

ಹಾವೇರಿ: ಮುಕ್ತ, ನ್ಯಾಯ ಸಮ್ಮತ ಹಾಗೂ ಪಾರದರ್ಶಕ ಚುನಾವಣೆಗೆ ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಹಾಗೂ ನೀತಿಸಂಹಿತೆ ಉಲ್ಲಂಘನೆಯಾಗದಂತೆ ನಿಗಾ ವಹಿಸಬೇಕು ಎಂದು ಶಿಗ್ಗಾಂವಿ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕರಾಗಿ ನೇಮಕಗೊಂಡಿರುವ ಐಎಎಸ್ ಅಧಿಕಾರಿ ಕಮಲರಾಮ ಮೀನಾ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿವರ ಕಚೇರಿ ಸಭಾಂಗಣದಲ್ಲಿ ಶನಿವಾರ ಶಿಗ್ಗಾಂವಿ ಉಪ ಚುನಾವಣೆ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಮತಗಟ್ಟೆಗಳಲ್ಲಿ ರ‌್ಯಾಂಪ್, ಶೌಚಗೃಹ, ಬೆಳಕು ಸೇರಿದಂತೆ ಮೂಲ ಸೌಕರ್ಯಗಳು ಇರಬೇಕು. ಜಿಲ್ಲೆಯ ಗಡಿ ಭಾಗದಲ್ಲಿ ಸ್ಥಾಪಿಸಲಾದ ಚೆಕ್‌ಪೋಸ್ಟ್‌ಗಳ ಮೇಲೆ ತೀವ್ರ ನಿಗಾವಹಿಸಬೇಕು. ಬ್ಯಾಂಕುಗಳಲ್ಲಿ ಹಣ ವರ್ಗಾವಣೆ ಬಗ್ಗೆ ಗಮನಹರಿಸಬೇಕು. ಶಿಗ್ಗಾಂವಿ ಕ್ಷೇತ್ರದ ವಿವಿಧ ಮತಗಟ್ಟೆಗಳಿಗೆ ನಾನು ಭೇಟಿ ನೀಡಿ ಪರಿಶೀಲಿಸುವೆ. ಏನೇ ಸಮಸ್ಯೆಗಳಿದ್ದರೂ ಪರಿಹರಿಸುವ ಕೆಲಸವಾಗಬೇಕು. ಚುನಾವಣಾ ಕಾರ್ಯವನ್ನು ಎಲ್ಲರೂ ಒಟ್ಟಾಗಿ ಮಾಡೋಣ ಎಂದರು.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, 26 ಅಭ್ಯರ್ಥಿಗಳಿಂದ 46 ನಾಮಪತ್ರ ಸಲ್ಲಿಕೆಯಾಗಿವೆ. ಅ.28ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅ.30 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ ಎಂದರು.

ಸುಗಮ ಚುನಾವಣೆ ಹಾಗೂ ಮಾದರಿ ನೀತಿ ಸಂಹಿತೆ ಪಾಲನೆಗೆ 23 ಸೆಕ್ಟರ್ ಅಧಿಕಾರಿಗಳ ತಂಡ ರಚಿಸಲಾಗಿದೆ. ವಿಡಿಯೋ ಸರ್ವಲೆನ್ಸ್ ತಂಡಗಳು, ವಿಡಿಯೋ ಪರಿಶೀಲನೆ ತಂಡ, ಪ್ಲೈಯಿಂಗ್ ಸ್ಕ್ವಾಡ್, ವೆಚ್ಚ ಪರಿಶೀಲನಾ ತಂಡ, 18 ಎಸ್.ಎಸ್.ಟಿ. ತಂಡ ರಚಿಸಲಾಗಿದೆ. ಜಿಲ್ಲೆಯಾದ್ಯಂತ 18 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಶಿಗ್ಗಾಂವ ವಿಧಾನಸಭಾ ಉಪ ಚುನಾವಣೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದರೆ ಸ್ವೀಕರಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 08375-200383 ಹಾಗೂ ಶಿಗ್ಗಾಂವಿಯಲ್ಲಿ 08378-222468 ಸಹಾಯವಾಣಿಯನ್ನು ಕಂಟ್ರೋಲ್ ರೂಂ ಹಾಗೂ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ 1950 ಸ್ಥಾಪಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಕ್ಷಯ ಶ್ರೀಧರ ಮಾತನಾಡಿ, ಸ್ವೀಪ್ ಚುಟುವಟಿಕೆ ಮೂಲಕ ಮತದಾನ ಪ್ರಮಾಣ ಹೆಚ್ಚಿಸಲು ರಂಗೋಲಿ, ಚಿತ್ರಕಲೆ, ಮಕ್ಕಳಿಂದ ಪಾಲಕರಿಗೆ ಪತ್ರ ಬರೆಸುವುದು ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಮಾತನಾಡಿ, ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ಎಲ್ಲ ಮತಗಟ್ಟೆಗಳಿಗೆ ಓರ್ವ ಎಎಸ್‌ಐ, ಪೊಲೀಸ್ ಕಾನ್‌ಸ್ಟೇಬಲ್ ಹಾಗೂ ಹೋಂಗಾರ್ಡ್ ನೇಮಕ ಮಾಡಲಾಗಿದೆ. ಎಲ್ಲ ಚೆಕ್‌ಪೋಸ್ಟ್‌ಗಳಿಗೆ ಪೊಲೀಸ್ ಸಿಬ್ಬಂದಿ ನಿಯೋಜನೆ ಸೇರಿದಂತೆ 737 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ವೆಚ್ಚ ವೀಕ್ಷಕರಾದ ಐಆರ್‌ಎಸ್ ಅಧಿಕಾರಿ ಡಿ.ಎಂ.ನಿಂಜೆ, ಅಪರ ಜಿಲ್ಲಾಧಿಕಾರಿ ಡಾ.ನಗಾರಜ, ಸವಣೂರ ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಮಹ್ಮದ್ ಖಿಜರ್, ಹಾವೇರಿ ಉಪವಿಭಾಗಾಧಿಕಾರಿ ಎಚ್.ಬಿ.ಚನ್ನಪ್ಪ, ಶಿಗ್ಗಾಂವಿ ತಹಸೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಸಂತೋಷ ಹಿರೇಮಠ, ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.