ಹಾವೇರಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ ಶೀಧರ ಬುಧವಾರ ಬ್ಯಾಡಗಿ ತಾಲೂಕಿನ ಹೆಡಿಗ್ಗೊಂಡ, ಮಲ್ಲೂರು, ಕಲ್ಲೇದೇವರು, ರಾಣೆಬೆನ್ನೂರ ತಾಲೂಕಿನ ಸುಣಕಲ್ಲಬಿದರಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯಿತಿ, ಸರ್ಕಾರಿ ಶಾಲೆಗಳು, ವಿದ್ಯಾರ್ಥಿ ವಸತಿ ನಿಲಯಗಳ ಪರಿಶೀಲನೆ ನಡೆಸಿದರು.
ಹೆಡಿಗ್ಗೊಂಡ ಗ್ರಾಮದ ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು, ಮಕ್ಕಳ ಕಲಿಕಾ ಸುಧಾರಣೆ ಕುರಿತು ಕೈಗೊಂಡ ಕ್ರಮದ ಬಗ್ಗೆ ಪರಿಶೀಲನೆ ನಡೆಸಿದರು. ನಂತರ ಶಾಲೆಯ ಮೂಲ ಸೌಕರ್ಯಗಳ ಪರಿಶೀಲನೆ ಅವಧಿಯಲ್ಲಿ ಶಾಲೆಯ ಎರಡು ಕೊಠಡಿಗಳು ಸೋರುತ್ತಿರುವ ಕುರಿತು ಶಾಲಾ ಶಿಕ್ಷಕರು ತಿಳಿಸಿದರು. ಕೂಡಲೇ ಹಾವೇರಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗೆ ತಾಲೂಕು ಪಂಚಾಯತಿ ನಿಧಿಯಿಂದ ಈ ಸಾಲಿನ ಕ್ರಿಯಾ ಯೋಜನೆಯಲ್ಲಿ ಕೊಠಡಿ ದುರಸ್ಥಿ ಸೇರ್ಪಡೆಗೊಳಿಸಲು ಸೂಚನೆ ನೀಡಿದರು. ಶಾಲೆಯ ಶೌಚಗೃಹ ದುರಸ್ತಿ ಮಾಡಿಸಿ ವರದಿ ನೀಡಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.
ಹೆಡಿಗ್ಗೊಂಡ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿದ ಅವರು, ಚುನಾಯಿತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಹಕಾರ ನೀಡಬೇಕು. ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆ ಕಾಮಗಾರಿ ಅವಧಿಯಲ್ಲಿ ಅಗೆದ ರಸ್ತೆ ದುರಸ್ಥಿ ಬಗ್ಗೆ ಸದಸ್ಯರು ತಿಳಿಸಿದರು. ತಕ್ಷಣವೇ ದುರಸ್ತಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರಿಗೆ ಸೂಚನೆ ನೀಡಿದರು.
ಗ್ರಾಮದ ಅಂಗನವಾಡಿ ಕೇಂದ್ರ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಲಾದ ಕೂಸಿನ ಮನೆಗೆ ಭೇಟಿ ನೀಡಿ ಪರಿಶೀಲಿಸಿದರು.
ಮಲ್ಲೂರು ಅಂಗನವಾಡಿ ಕೇಂದ್ರ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಲಾದ ಕೂಸಿನ ಮನೆಗೆ ಭೇಟಿ ನೀಡಿದರು. ನಂತರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರು. ಕಾಲಮಿತಿಯಲ್ಲಿ ಗ್ರಾಮದಲ್ಲಿ ಸ್ವ ಸಹಾಯ ಸಂಘದ ಮಳಿಗೆ ಕಾಮಗಾರಿ ಪೂರ್ಣಗೊಳಿಸಲು ಬ್ಯಾಡಗಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದರು.
ಕಲ್ಲೇದೇವರು ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ, ವಸತಿ ನಿಲಯದ ಮೂಲ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳಿಗೆ ಬೆಡ್ ಕಡಿಮೆ ಇರುವುದು ಕಂಡುಬಂದ ಹಿನ್ನೆಲೆಯಲ್ಲಿ, ತಕ್ಷಣವೇ ತಾಲೂಕು ಪಂಚಾಯಿತಿ ನಿಧಿಯಿಂದ ನಿಯಮಾನುಸಾರ ಖರೀದಿಸಿ ಪೂರೈಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣವಾಗುತ್ತಿರುವ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿ, ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಣೆಬೆನ್ನೂರ ತಾಲೂಕಿನ ಸುಣಕಲ್ ಬಿದರಿ ಗ್ರಾಮಕ್ಕೆ ಭೇಟಿ ನೀಡಿ ಅವರು, ಗ್ರಾಮದಲ್ಲಿ ಅನುಷ್ಠಾನಗೊಳಿಸುತ್ತಿರುವ ಆಣೂರು ಬಹುಗ್ರಾಮ ನದಿ ನೀರು ಯೋಜನೆಯ ಕಾಮಗಾರಿ ಪರಿಶೀಲನೆ ನಡೆಸಿದರು. ನಿಗದಿತ ಅವಧಿಯೊಳಗಾಗಿ ಯೋಜನೆ ಪೂರ್ಣಗೊಳಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.