ಹಿರೇಕೆರೂರಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಸಹಕಾರ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸಿದರು. ಸಚಿವ ರುದ್ರಪ್ಪ ಲಮಾಣಿ, ಶಾಸಕರಾದ ಯು.ಬಿ. ಬಣಕಾರ, ಬಸವರಾಜ ಶಿವಣ್ಣನವರ, ಎಸ್.ಆರ್. ಪಾಟೀಲ, ಎಸ್.ಎಸ್. ಪಾಟೀಲ ಇತರರಿದ್ದರು. 
ಹಾವೇರಿ

ಹಾವೇರಿ ಜಿಲ್ಲೆಗೆ ಡಿಸಿಸಿ ಬ್ಯಾಂಕ್ ಮಂಜೂರಿ ಶೀಘ್ರ

ಹಿರೇಕೆರೂರು: ಹಾವೇರಿ ಜಿಲ್ಲೆಗೆ ಬಹುದಿನಗಳ ಬೇಡಿಕೆಯಾಗಿರುವ ಮಧ್ಯವರ್ತಿ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಅನ್ನು ಕೆಲವೇ ದಿನಗಳಲ್ಲಿ ಮಂಜೂರು ಮಾಡಿಸುವುದಾಗಿ ಸಹಕಾರ ಸಚಿವ ಲಕ್ಷ್ಮಣ ಸವದಿ ಭರವಸೆ ನೀಡಿದರು.

ಪಟ್ಟಣದ ತರಳಬಾಳು ಜಗದ್ಗುರು ಶಿಕ್ಷಣ ಮಹಾವಿದ್ಯಾಲಯದ ಶಾಂತಿನಿಕೇತನ ಆವರಣದಲ್ಲಿ ಎಸ್.ಎಸ್. ಪಾಟೀಲ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ 73ನೇ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹೊಸ ಸಹಕಾರಿ ಬ್ಯಾಂಕ್ ಸ್ಥಾಪಿಸುವುದು ಮುಖ್ಯವಲ್ಲ, ಅದು ರೈತರು ಹಾಗೂ ಸಹಕಾರಿ ಸಂಸ್ಥೆಗಳ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಸದೃಢವಾಗಿ ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದರು.

ರಾಜ್ಯದಲ್ಲಿ ಸುಮಾರು 30 ಲಕ್ಷ ಕುಟುಂಬಗಳಿಗೆ 27 ಸಾವಿರ ಕೋಟಿ ರೂ. ಬಡ್ಡಿರಹಿತ ಸಾಲ ನೀಡಲಾಗುತ್ತಿದೆ. ಹಾಲು ಶೇಖರಣೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದ್ದು, ಪ್ರತಿ ಲೀಟರ್ ಹಾಲಿಗೆ ಏಳು ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತಿದೆ. ಸಹಕಾರ ಕ್ಷೇತ್ರದ ಮೂಲಕ ರೈತರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಆದ್ಯತೆ ನೀಡಬೇಕಾಗಿದೆ. ಸಹಕಾರ ಇಲಾಖೆಗೆ ಮುಂಬರುವ ರಾಜ್ಯ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿ, ಹಾವೇರಿ ಜಿಲ್ಲೆಗೆ ಕೆಸಿಸಿ ಬ್ಯಾಂಕ್ ಸ್ಥಾಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಕಬ್ಬಿನ ದರ ನಿಗದಿ ವಿಚಾರವಾಗಿ ಈಗಾಗಲೇ ದೆಹಲಿಗೆ ತೆರಳಿ ಸಂಬಂಧಪಟ್ಟವರೊಂದಿಗೆ ಚರ್ಚಿಸಲಾಗಿದೆ. ಕೇಂದ್ರದಿಂದ ಸಮಿತಿಯೊಂದು ಬಂದು ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸಿದ್ದು, ಕಬ್ಬು ಬೆಳೆಗಾರರ ಸಮಸ್ಯೆಗಳು ಹಾಗೂ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.

ಶಾಸಕ ಯು.ಬಿ. ಬಣಕಾರ ಮಾತನಾಡಿ, ಧಾರವಾಡ ಜಿಲ್ಲೆಯಿಂದ ವಿಭಜನೆಯಾದ ನಂತರ ಹಾವೇರಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಹಾಗೂ ಕೆಸಿಸಿ ಬ್ಯಾಂಕ್ ಸ್ಥಾಪಿಸಬೇಕೆಂಬ ಬೇಡಿಕೆ ಈಡೇರಿಸುವತ್ತ ಸಚಿವರು ಗಮನಹರಿಸಬೇಕು ಎಂದು ಮನವಿ ಮಾಡಿದರು.

ಸಹಕಾರ ವಾರಪತ್ರಿಕೆಯನ್ನು ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಗಣ್ಯರು ಬಿಡುಗಡೆಗೊಳಿಸಿದರು. ಸಹಕಾರ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ಸಹಕಾರಿ ಧುರೀಣರನ್ನು ಸನ್ಮಾನಿಸಲಾಯಿತು.

ಶಾಸಕರಾದ ಬಸವರಾಜ ಶಿವಣ್ಣನವರ, ರಾಜ್ಯ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ಧಾರವಾಡ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಶಿವನಗೌಡ ಪಾಟೀಲ ಮಾತನಾಡಿದರು.

ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ಎಸ್. ಪಾಟೀಲ, ಜಿಲ್ಲಾ ಕೆಎಂಎಫ್ ಉಪಾಧ್ಯಕ್ಷ ಉಜ್ಜನಗೌಡ ಮಾವಿನತೋಪ, ಕೊಟ್ರೆಶಪ್ಪ ಬಸೆಗಣ್ಣಿ, ಲಿಂಗರಾಜ ಚಪ್ಪರದಹಳ್ಳಿ, ಮಲ್ಲಿಕಾರ್ಜುನ ಬುರಡಿಕಟ್ಟಿ, ಪಾಲಾಕ್ಷಗೌಡ ಪಾಟೀಲ, ಎಸ್.ಬಿ. ತಿಪ್ಪಣ್ಣನವರ, ಜಗದೀಶ ತಂಬಾಕದ, ಮಂಜನಗೌಡ ಪಾಟೀಲ ಸೇರಿದಂತೆ ವಿವಿಧ ಸಹಕಾರಿ ಸಂಘಗಳ ಪದಾಧಿಕಾರಿಗಳು ಇದ್ದರು. ಸವಿತಾ ಎನ್.ಇ., ರೇಖಾ ನಲವಾಲದ ಹಾಗೂ ಷಣ್ಮುಖಪ್ಪ ಮುಚ್ಚಂಡಿ ನಿರ್ವಹಿಸಿದರು.