Haveri, Chalawadi, Mahasabha, Demands, MLA Abbayya, Ministership,  
ಹಾವೇರಿ

ಶಾಸಕ ಪ್ರಸಾದ ಅಬ್ಬಯ್ಯರಿಗೆ ಮಂತ್ರಿ ಸ್ಥಾನ ನೀಡಿ; ಹಾವೇರಿ ಜಿಲ್ಲಾ ಚಲವಾದಿ ಮಹಾಸಭಾ ಆಗ್ರಹ

ಹಾವೇರಿ: ಹುಬ್ಬಳ್ಳಿ- ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಜಿಲ್ಲಾ ಚಲವಾದಿ ಮಹಾಸಭಾ ಅಧ್ಯಕ್ಷ ಮಲ್ಲೇಶಪ್ಪ ಮದ್ಲೇರ ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದರು.
ಪ್ರಸಾದ ಅಬ್ಬಯ್ಯ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಜನಪರ ಕಾರ್ಯಗಳು ಹಾಗೂ ಅಭಿವೃದ್ಧಿ ಯೋಜನೆಗಳ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ರಾಜ್ಯದಲ್ಲಿ ಸುಮಾರು 50 ಲಕ್ಷ ಜನಸಂಖ್ಯೆ ಇರುವ ಸಮುದಾಯಕ್ಕೆ ವಿಶೇಷ ಪ್ರಾಧಾನ್ಯತೆ ನೀಡಬೇಕು. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಪ್ರಸಾದ ಅಬ್ಬಯ್ಯ ಅವರಿಗೆ ಪ್ರಾತಿನಿಧ್ಯ ನೀಡಿ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ ಎಸ್. ಸನದಿ ಮಾತನಾಡಿ, ಉತ್ತರ ಕರ್ನಾಟಕ ಭಾಗದ ಪ್ರಮುಖ ದಲಿತ ನಾಯಕ ಪ್ರಸಾದ ಅಬ್ಬಯ್ಯ ದೀನದಲಿತರು, ಹಿಂದುಳಿದ ವರ್ಗಗಳು, ವಿದ್ಯಾರ್ಥಿಗಳು ಹಾಗೂ ಯುವಕರ ಪರವಾಗಿ ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಈ ಭಾಗದ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದ್ದು, ಸಮುದಾಯವೂ ಸರ್ಕಾರ ಮತ್ತು ಪಕ್ಷದೊಂದಿಗೆ ಇನ್ನಷ್ಟು ಗಟ್ಟಿಯಾಗಿ ನಿಲ್ಲಲಿದೆ. ಹಾಗಾಗಿ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮತೋಲನದ ದೃಷ್ಟಿಯಿಂದ ಪ್ರಸಾದ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಶಂಕರಪ್ಪ ಲಕಮಣ್ಣನವರ, ಬಸವರಾಜ ಚಲವಾದಿ, ಬಸವರಾಜ ಸಾವಕ್ಕನವರ, ಪ್ರಮೋದ ಚಲವಾದಿ ಹಾಗೂ ತಿಪ್ಪೇಶ್ವರ ಚಲವಾದಿ, ಇತರರಿದ್ದರು.