dc, ddpi, sslc, exam,  
ಹಾವೇರಿ

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 23,361 ವಿದ್ಯಾರ್ಥಿಗಳು; ಮಾ.18ರಿಂದ ಏ.2ರವರೆಗೆ ಎಕ್ಸಾಂ * ನಕಲು ಮುಕ್ತವಾಗಿ ನಡೆಸಲು ಡಿಸಿ ದಾನಮ್ಮನವರ ಕಟ್ಟುನಿಟ್ಟಿನ ಸೂಚನೆ

ಹಾವೇರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಏಪ್ರಿಲ್ 2ರವರೆಗೆ ಜಿಲ್ಲೆಯಲ್ಲಿ ನಡೆಯಲಿದ್ದು, ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ. ಜಿಲ್ಲೆಯ 471 ಪ್ರೌಢ ಶಾಲೆಗಳಿಂದ ಒಟ್ಟು 81 ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, 23,361 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ನಗರದ ಜಿಲ್ಲಾಧಿಕಾರಿಯವರ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ -1ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಬಾರಿ ಜಿಲ್ಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದೆ. ಈ ನಿಟ್ಟಿನಲ್ಲಿ ಇಲಾಖೆಯು ಸಕಲ ತಯಾರಿ ಮಾಡಿಕೊಂಡಿದೆ. ಪರೀಕ್ಷೆಯನ್ನು ಪಾರದರ್ಶಕ ಹಾಗೂ ನಕಲು ಮುಕ್ತವಾಗಿ ನಡೆಸಲು ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಶುದ್ದ ಕುಡಿಯುವ ನೀರು, ಕೊಠಡಿಯ ಸ್ವಚ್ಛತೆ, ಅಗತ್ಯ ಬೆಳಕಿನ ಸೌಲಭ್ಯ, ಸಿಸಿಟಿವಿ ಕ್ಯಾಮರಾ, ಉತ್ತಮ ಆಸನಗಳ ವ್ಯವಸ್ಥೆ, ಸಾರಿಗೆ ವ್ಯವಸ್ಥೆ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲ. ವಿದ್ಯಾರ್ಥಿಗಳ ಪರೀಕ್ಷೆಗೆ ಯಾವುದೇ ರೀತಿ ತೊಂದರೆ ಆಗಬಾರದು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಪರೀಕ್ಷಾ ಕೇಂದ್ರಕ್ಕೆ ನಿಯೋಜನೆಗೊಂಡ ಎಲ್ಲ ಸಿಬ್ಬಂದಿಗೂ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಯಾವುದೇ ಕಾರಣಕ್ಕೂ ಮೊಬೈಲ್ ತೆಗೆದುಕೊಂಡು ಬರುವಂತಿಲ್ಲ ಎಂದರು.
ಬೆಳಗಾವಿ ವಿಭಾಗದ 9 ಶೈಕ್ಷಣಿಕ ಜಿಲ್ಲೆಗಳಲ್ಲಿ 4 ಜಿಲ್ಲೆಗಳು ಕಳೆದ ಬಾರಿ ಪ್ರತಿಶತ 80ರಷ್ಟು ಫಲಿತಾಂಶ ಮಾಡಿವೆ. ಹಾವೇರಿ 5ನೇ ಸ್ಥಾನದಲ್ಲಿದೆ. ಈ ಬಾರಿ ಫಲಿತಾಂಶ ಮತ್ತಷ್ಟು ಸುಧಾರಿಸಬೇಕು. ಇದರಲ್ಲಿ ಶಿಕ್ಷಕರ ಪಾತ್ರ ಮಹತ್ವದಾಯಕವಾಗಿದೆ. ಕಲಿಕೆಯಲ್ಲಿ ಹಿಂದೆ ಇರುವ ಹಾಗೂ ಮಾನಸಿಕವಾಗಿ ಕುಗ್ಗಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಮನೋ ಸಾಮರ್ಥ್ಯ ಹೆಚ್ಚಿಸಿ, ಅವರಿಗೆ ಧೈರ್ಯ ತುಂಬಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಬೇಕು ಎಂದರು.
ಪರೀಕ್ಷಾ ದಿನಗಳಂದು ಆಯಾ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿರುವ ತಹಸೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು ಹಾಗೂ ಖಜಾನೆ ಅಧಿಕಾರಿಗಳು ತಮಗೆ ವಹಿಸಿಕೊಟ್ಟ ವಿಶೇಷ ವಿಚಕ್ಷಣಾ ದಳದ ಕರ್ತವ್ಯಗಳನ್ನು ತಪ್ಪದೇ ನಿರ್ವಹಿಸಬೇಕು ಎಂದರು.
ಪರೀಕ್ಷಾ ದಿನಗಳಂದು ಹೆಸ್ಕಾಂ ಇಲಾಖೆಯು ಸಮರ್ಪಕವಾಗಿ ವಿದ್ಯುತ್ ಪೂರೈಸುವ ಜತೆಗೆ ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೊಠಡಿ ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, ಸ್ಥಾನಿಕ ಜಾಗೃತ ದಳ ಹಾಗೂ ಮೊಬೈಲ್ ಸ್ವಾದೀನ ದಳಗಳ ಅಧಿಕಾರಿಗಳು ತಮಗೆ ವಹಿಸಿದ ಕರ್ತವ್ಯಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಡಾ.ಎಲ್.ನಾಗರಾಜ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ಡಿಡಿಪಿಐ ಮೋಹನ ದಂಡಿನ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಪೊಲೀಸ್ ಭದ್ರತೆ
ಪ್ರಶ್ನೆ ಪತ್ರಿಕೆಗಳನ್ನು ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗಬೇಕು. ಪ್ರಶ್ನೆಪತ್ರಿಕೆಗಳ ಸಾಗಾಟಕ್ಕೆ ಖಾಸಗಿ ವಾಹನಗಳ ಬಳಕೆ ಮಾಡಬಾರದು. ಸರ್ಕಾರಿ ವಾಹನಗಳನ್ನು ಮಾತ್ರ ಬಳಸಬೇಕು. ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅನಗತ್ಯ ಗೊಂದಲಗಳಿಗೆ ಅವಕಾಶ ಮಾಡಿಕೊಡಬೇಡಿ ಎಂದರು ಡಿಸಿ.
ಸಿಸಿಟಿವಿ ಕ್ಯಾಮರಾ ಕಡ್ಡಾಯ
ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಜತೆಗೆ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಕುರಿತು ನಿಗಾ ವಹಿಸಬೇಕು. ವಿದ್ಯುತ್ ಕೈಕೊಟ್ಟರೆ ಜನರೇಟರ್ ಅಥವಾ ಯುಪಿಎಸ್ ವ್ಯವಸ್ಥೆ ಮಾಡಿಕೊಂಡಿರಬೇಕು. ಪರೀಕ್ಷಾ ಕೊಠಡಿಯ ಹೊರಗಡೆ 200ಮೀ ಅಳತೆಯಲ್ಲಿ ನಿಷೇಧಾಜ್ಞೆ ಜಾರಿಯಿದ್ದು, ಅದಕ್ಕೆ ಅವಶ್ಯಕವಾದ ಪೊಲೀಸ್ ಸಿಬ್ಬಂದಿಯನ್ನು ಪೊಲೀಸ್ ಇಲಾಖೆ ನಿಯೋಜಿಸಬೇಕು ಎಂದು ಡಿಸಿ ಅಧಿಕಾರಿಗಳಿಗೆ ನಿರ್ದೇಶಿಸಿದರು.