ಹಾವೇರಿ: ಜಿಲ್ಲೆಯ 81 ಪರೀಕ್ಷಾ ಕೇಂದ್ರಗಳಲ್ಲಿ ಮಾ.18ರಿಂದ ಏ.2ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-1 ನಡೆಯಲಿದ್ದು, ಇದಕ್ಕಾಗಿ ವ್ಯವಸ್ಥಿತ ಹಾಗೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನ ದಂಡಿನ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, 21,446 ಹೊಸ ವಿದ್ಯಾರ್ಥಿಗಳು, 1,296 ಪುನರಾವರ್ತಿತ ವಿದ್ಯಾರ್ಥಿಗಳು, 528 ಖಾಸಗಿ ಹೊಸ ಅಭ್ಯರ್ಥಿಗಳು, 78 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಸೇರಿ ಒಟ್ಟು 23,348 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 11,539 ವಿದ್ಯಾರ್ಥಿಗಳು ಮತ್ತು 11,809 ವಿದ್ಯಾರ್ಥಿನಿಯರು ಪರೀಕ್ಷೆ ಬೆರೆಯಲಿದ್ದಾರೆ.
ಪ್ರಶ್ನೆಪ್ರತಿಕೆ ಸರಬರಾಜುಗಾಗಿ 32 ಮಾರ್ಗಗಳನ್ನು ರಚಿಸಲಾಗಿದೆ. ಪರೀಕ್ಷಾ ಕಾರ್ಯ ಸುಗಮವಾಗಿ ನಡೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಂಟು ಜಿಲ್ಲಾ ಮಟ್ಟದ ವೀಕ್ಷಕರ ತಂಡವನ್ನು ಹಾಗೂ 32 ತಾಲೂಕು ವೀಕ್ಷಕರ ತಂಡವನ್ನು ಜಿಲ್ಲಾಧಿಕಾರಿಗಳು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇದಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಭೆ ನಡೆಸಿ, ನಕಲು ರಹಿತ ಹಾಗೂ ಪಾರದರ್ಶಕ ಪರೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಅಗತ್ಯ ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಜಾಗೃತ ದಳವನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರತಿ ಪರೀಕ್ಷಾ ಕೇಂದ್ರಕ್ಕೆ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲಾಗಿದೆ. ಉತ್ತಮ ಆಸನದ ವ್ಯವಸ್ಥೆ, ಕುಡಿಯುವ ನೀರು ಮತ್ತು ಶೌಚಗೃಹದ ವ್ಯವಸ್ಥೆ, ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜಿಲ್ಲಾಮಟ್ಟದ ವೆಬ್ ಕಾಸ್ಟಿಂಗ್ ವೀಕ್ಷಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ.
ಬ್ಯಾಡಗಿ ತಾಲೂಕಿನಲ್ಲಿ 7, ಹಾನಗಲ್ಲ ಹಾಗೂ ಹಾವೇರಿಯಲ್ಲಿ ತಲಾ 14, ಹಿರೇಕೆರೂರ-11, ರಾಣೆಬೆನ್ನೂರ-15, ಸವಣೂರ 8 ಹಾಗೂ ಶಿಗ್ಗಾಂವಿ ತಾಲೂಕಿನಲ್ಲಿ 12 ಸೇರಿ ಒಟ್ಟು 81 ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ಸುಗಮ ಪರೀಕ್ಷೆ ನಡೆಸಲು 81 ಮುಖ್ಯಅಧೀಕ್ಷಕರು, 15 ಉಪ ಮುಖ್ಯಅಧೀಕ್ಷಕರು, 14 ಸಿಸಿಟಿವಿ ವೆಬ್ ಕಾಸ್ಟಿಂಗ್ ತಂಡ, 81 ಕಸ್ಟೋಡಿಯನ್, 81 ಸ್ಥಾನಿಕ ಜಾಗೃತದಳ, 32 ಮಾರ್ಗಾಧಿಕಾರಿಗಳು, 1,089 ಕೊಠಡಿ ಮೇಲ್ವಿಚಾರಕರು ಹಾಗೂ 81 ಕಚೇರಿ ಸಹಾಯಕರನ್ನು ನೇಮಕ ಮಾಡಲಾಗಿದೆ.