minister, shivanand patil
ಹಾವೇರಿ: ರಾಜ್ಯ ಸರ್ಕಾರ ಒಂದು ಸಾವಿರ ದಿನಗಳನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಹಾವೇರಿಯ ಸಾಹಿತ್ಯ ಸಮ್ಮೇಳನ ನಡೆದಿದ್ದ ಸ್ಥಳದಲ್ಲಿ ಫೆ.13ರಂದು ಬೃಹತ್ ಸಾಧನಾ ಸಮಾವೇಶ ಆಯೋಜಿಸಲಾಗುತ್ತಿದೆ. ಒಂದು ಲಕ್ಷ ಹಕ್ಕು ಪತ್ರ ವಿತರಣೆ ಜತೆಗೆ ಇದೊಂದು ಐತಿಹಾಸಿಕ ಸಮಾವೇಶ ಮಾಡಲು ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಸಮಾವೇಶ ಆಯೋಜನೆ ಮಾಡಲಿರುವ ಅಜ್ಜನ ಗುಡಿ ಎದುರಿನ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳ ಫಲಾನುಭವಿಗಳಿಗೆ ಒಂದು ಲಕ್ಷಕ್ಕೂ ಅಧಿಕ ಕಂದಾಯ ಗ್ರಾಮ ಹಕ್ಕು ಪತ್ರ ವಿತರಿಸಲಾಗುವುದು. ಪೋಡಿ ಮುಕ್ತ ಅಭಿಯಾನ ಸೇರಿ, ಇತರ ಸವಲತ್ತುಗಳನ್ನು ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದರು.
ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನರಿಗೆ ಕೊಟ್ಟ ಮಾತಿನಂತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಎಲ್ಲ ಗ್ಯಾರಂಟಿಗಳನ್ನು ಈಡೇರಿಸಿದೆ. ಹಕ್ಕು ಪತ್ರ ವಿತರಣೆ ಮಾಡುವುದಾಗಿ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ವಿಜಯನಗರದಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಮೊದಲ ಹಂತದಲ್ಲಿ ಹಕ್ಕು ಪತ್ರ ವಿತರಿಸಲಾಗಿದೆ. ಹಾವೇರಿ ಸಮಾವೇಶದಲ್ಲಿ ಸುಮಾರು ಲಕ್ಷಕ್ಕೂ ಅಧಿಕ ಹಕ್ಕುಪತ್ರ ವಿತರಿಸಲಾಗುವುದು ಎಂದು ಹೇಳಿದರು.
ಸುಮಾರು ಒಂದು ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ. ಅಕ್ಕಪಕ್ಕದ ಜಿಲ್ಲೆಗಳಿಂದಲೂ ಜನ ಆಗಮಿಸಲಿದ್ದು, ಎಲ್ಲಿಯೂ ಸಮಸ್ಯೆಯಾಗದಂತೆ ಕಾರ್ಯಕ್ರಮ ಆಯೋಜನೆ ಮಾಡಲು ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ. ವಾಹನಗಳ ನಿಲುಗಡೆ, ಗಣ್ಯರ ವಾಹನಗಳ ನಿಲುಗಡೆ, ಹೆಲಿಪ್ಯಾಡ್‌ಗಳ ನಿರ್ಮಾಣಕ್ಕೆ ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ವಿಜಯನಗರದಲ್ಲಿ ಆಯೋಜಿಸಿದ್ದ ಸಮಾವೇಶದ ಮಾದರಿಯಲ್ಲೇ ವೇದಿಕೆಯನ್ನು ನಿರ್ಮಿಸಬೇಕು. ಗಣ್ಯರಿಗೆ ಸೂಕ್ತ ಭದ್ರತೆ ವ್ಯವಸ್ಥೆ ಮಾಡಬೇಕು. ಸಮಾವೇಶದಲ್ಲಿ ಭಾಗವಹಿಸುವ ಜನರಿಗೂ ಯಾವುದೇ ಸಮಸ್ಯೆಯಾಗಬಾರದು. ವೇದಿಕೆಯನ್ನು ವ್ಯವಸ್ಥಿತವಾಗಿ ನಿರ್ಮಿಸಬೇಕು. ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು ಎಂದು ಸಚಿವರು ನಿರ್ದೇಶಿಸಿದರು. ಎಎಸ್‌ಪಿ ಲಕ್ಷ್ಮಣ ಶಿರಕೋಳ ವಾಹನ ನಿಲುಗಡೆ ಸ್ಥಳದ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕ ಬಸವರಾಜ ಶಿವಣ್ಣವರ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮ್‌ಪೀರ್ ಖಾದ್ರಿ, ಆನಂದ ಗಡ್ಡದ್ದೇವರಮಠ, ಇತರರಿದ್ದರು.
ವೇದಿಕೆ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಿದ ಮಾದರಿಯಲ್ಲೇ ಸಾಧನಾ ಸಮಾವೇಶದ ಸಿದ್ಧತೆ ಮಾಡಲಾಗುವುದು. ವಾಹನಗಳ ನಿಲುಗಡೆಗೆ ವೇದಿಕೆ ಸಮೀಪದಲ್ಲೇ ವ್ಯವಸ್ಥೆ ಮಾಡಲಾಗುವುದು. ವೈದ್ಯಕೀಯ ಕಾಲೇಜ್ ಆವರಣದಲ್ಲಿ ಹೆಲಿಪ್ಯಾಡ್ ನಿರ್ಮಿಸಿದರೆ ಸೂಕ್ತವಾಗಲಿದೆ ಎಂದು ತಿಳಿಸಿದರು.