Haveri, Environment Day, DC, Danammanavar, 
ಹಾವೇರಿ

ಪರಿಸರ ಸಂರಕ್ಷಣೆ ಎಲ್ಲರ ಆದ್ಯ ಕರ್ತವ್ಯ; ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸಲಹೆ; ಜಿಪಂ ಆವರಣದಲ್ಲಿ ಪರಿಸರ ದಿನಾಚರಣೆ

ಕೇಶವಮೂರ್ತಿ ಬೇಲೂರಪ್ಪನವರ
ಹಾವೇರಿ: ಪರಿಸರವು ಮಾನವ ಜೀವನದ ಮೂಲ ಆಧಾರವಾಗಿದೆ. ಗಾಳಿ, ನೀರು, ಮಣ್ಣು, ಸಸ್ಯಗಳು ಮತ್ತು ಜೀವಜಾಲಗಳ ಸಮತೋಲನದಿಂದ ಪರಿಸರ ನಿರ್ಮಾಣವಾಗಿದ್ದು, ಇವುಗಳ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಾಮಾಜಿಕ ಅರಣ್ಯ ವಿಭಾಗದಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ, ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ನಗರೀಕರಣ, ಕೈಗಾರಿಕೀಕರಣ, ಅರಣ್ಯ ನಾಶ ಮತ್ತು ಮಾಲಿನ್ಯದಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಹವಾಮಾನ ಬದಲಾವಣೆ, ಅನಿಯಮಿತ ಮಳೆ, ಬರಗಾಲ, ಪ್ರವಾಹ ಹಾಗೂ ತಾಪಮಾನದ ಏರಿಕೆ ಮುಂತಾದ ಸಮಸ್ಯೆಗಳು ಪರಿಸರ ಅಸಮತೋಲನಕ್ಕೆ ಕಾರಣವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಪರಿಸರ ಸಂರಕ್ಷಣೆಗೆ ಗಿಡ ನೆಡುವುದು ಅತ್ಯಂತ ಸರಳ ಹಾಗೂ ಪರಿಣಾಮಕಾರಿ ಮಾರ್ಗವಾಗಿದೆ. ಒಂದು ಗಿಡವು ಬೆಳೆಯುತ್ತ ದೊಡ್ಡ ಮರವಾದಾಗ ಪರಿಸರಕ್ಕೆ ಅನೇಕ ರೀತಿಯಲ್ಲಿ ಸಹಕಾರಿಯಾಗುತ್ತದೆ. ಮರಗಳು ವಾತಾವರಣದಲ್ಲಿರುವ ಇಂಗಾಲದ ಡೈಆಕ್ಸೆಡ್ ಹೀರಿಕೊಂಡು ಆಮ್ಲಜನಕವನ್ನು ಬಿಡುಗಡೆ ಮಾಡುತ್ತವೆ. ಇದರಿಂದ ಗಾಳಿಯ ಗುಣಮಟ್ಟ ಸುಧಾರಿಸಿ ಜೀವಿಗಳ ಆರೋಗ್ಯ ಕಾಪಾಡಲು ಸಹಕಾರಿಯಾಗುತ್ತದೆ. ಒಂದು ಮರವು ತನ್ನ ಜೀವಿತಾವಧಿಯಲ್ಲಿ ಸಾವಿರಾರು ಕಿಲೋಗ್ರಾಂಗಳಷ್ಟು ಕಾರ್ಬನ್ ಅನ್ನು ಹೀರಿಕೊಳ್ಳುವ ಸಾಮರ್ಥ್ಯ ಹೊಂದಿದ್ದು, ಜಾಗತಿಕ ತಾಪಮಾನ ಏರಿಕೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.
ಪಕ್ಷಿಗಳು, ಪ್ರಾಣಿಗಳು ಮತ್ತು ವಿವಿಧ ಜೀವಿಗಳಿಗೆ ಮರಗಳು ಆಶ್ರಯ ತಾಣಗಳಾಗಿವೆ. ಜೀವ ವೈವಿಧ್ಯತೆಯ ಸಂರಕ್ಷಣೆಯಲ್ಲಿ ಮರಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಹಣ್ಣು, ಹೂವು, ಔಷಧೀಯ ಸಸ್ಯಗಳು ಹಾಗೂ ಅರಣ್ಯ ಸಂಪನ್ಮೂಲಗಳ ಮೂಲಕ ಮರಗಳು ಮಾನವನ ಆರ್ಥಿಕ ಹಾಗೂ ಆರೋಗ್ಯದ ಅಗತ್ಯಗಳನ್ನು ಪೂರೈಸುತ್ತವೆ ಎಂದು ಹೇಳಿದರು.
ಪ್ರತಿಯೊಬ್ಬ ವ್ಯಕ್ತಿಯ ತನ್ನ ಜೀವನದಲ್ಲಿ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದನ್ನು ಪೋಷಿಸುವ ಸಂಕಲ್ಪ ಮಾಡಬೇಕು. ಶಾಲೆಗಳು, ಕಾಲೇಜುಗಳು, ಸರ್ಕಾರಿ ಕಚೇರಿಗಳು, ಗ್ರಾಮ ಪಂಚಾಯಿತಿಗಳು ಹಾಗೂ ಸಂಘ-ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಗಿಡ ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಗಿಡ ನೆಡುವುದಷ್ಟೇ ಅಲ್ಲದೆ, ಅವುಗಳನ್ನು ಸಂರಕ್ಷಿಸಿ ಬೆಳೆಸುವುದಕ್ಕೂ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಪರಿಸರ ಸಂರಕ್ಷಣೆ ಒಂದು ದಿನದ ಕಾರ್ಯಕ್ರಮವಲ್ಲ, ಅದು ನಿರಂತರ ಜವಾಬ್ದಾರಿಯಾಗಿದೆ. ನಮ್ಮ ಪರಿಸರವನ್ನು ನಾವು ಇಂದು ಕಾಪಾಡಿದರೆ, ಮುಂದಿನ ಪೀಳಿಗೆಗೆ ಆರೋಗ್ಯಕರ ಮತ್ತು ಸುಸ್ಥಿರ ಭವಿಷ್ಯವನ್ನು ನೀಡಲು ಸಾಧ್ಯವಾಗುತ್ತದೆ. ಆದ್ದರಿಂದ ಎಲ್ಲರೂ ಕೈಜೋಡಿಸಿ ಪರಿಸರ ಸಂರಕ್ಷಣೆಗೆ ಮುಂದಾಗೋಣ. ಹೆಚ್ಚಿನ ಗಿಡಗಳನ್ನು ನೆಟ್ಟು ಹಸಿರು ಭೂಮಿಯ ನಿರ್ಮಾಣಕ್ಕೆ ಸಹಕರಿಸೋಣ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ಪುನೀತ್ ಬಿ.ಆರ್., ಮುಖ್ಯ ಯೋಜನಾಧಿಕಾರಿ ಎಸ್.ವೈ. ಮೀಶಿ, ಯೋಜನಾ ನಿರ್ದೇಶಕಿ ರೇಖಾ ಡೊಳ್ಳಿನವರ, ಯೋಜನಾ ಅಂದಾಜು ಮೌಲ್ಯಪಾನಾಧಿಕಾರಿ ಕುಮಾರ ಮಣ್ಣವಡ್ಡರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಖೇಮಸಿಂಗ್ ರಾಠೋಡ, ಇತರರು ಉಪಸ್ಥಿತರಿದ್ದರು.
ಕೃಷಿಗೂ ಸಹಕಾರಿ, ಅಂತರ್ಜಲ ವೃದ್ಧಿ
ಗಿಡಗಳು ಮಣ್ಣಿನ ಸವಕಳಿಯನ್ನು ತಡೆಗಟ್ಟುತ್ತವೆ. ಮರಗಳ ಬೇರುಗಳು ಮಣ್ಣನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಂಡು ಮಳೆ ಮತ್ತು ಗಾಳಿಯಿಂದ ಮಣ್ಣು ಕೊಚ್ಚಿಹೋಗುವುದನ್ನು ತಡೆಯುತ್ತವೆ. ಇದರಿಂದ ಕೃಷಿ ಭೂಮಿಯ ಫಲವತ್ತತೆ ಉಳಿಯುತ್ತದೆ. ಮರಗಳು ಮಳೆಯ ಪ್ರಮಾಣವನ್ನು ಹೆಚ್ಚಿಸಲು ಹಾಗೂ ಅಂತರ್ಜಲ ಮಟ್ಟವನ್ನು ಕಾಪಾಡಲು ಸಹಕಾರಿಯಾಗುತ್ತವೆ. ನೆರಳು ನೀಡುವ ಮೂಲಕ ಪರಿಸರದ ತಾಪಮಾನವನ್ನು ಕಡಿಮೆ ಮಾಡಿ, ಸ್ಥಳೀಯ ಹವಾಮಾನವನ್ನು ಸಮತೋಲನದಲ್ಲಿಡುತ್ತವೆ ಎಂದರು ಡಿಸಿ.
1.22 ಲಕ್ಷ ಸಸಿ ವಿತರಣೆ
ಸಾಮಾಜಿಕ ಅರಣ್ಯ ವಿಭಾಗ ವತಿಯಿಂದ 2026-27ನೇ ಸಾಲಿನಲ್ಲಿ ಸಾರ್ವಜನಿಕರು, ರೈತರಿಗೆ 1,22,000 ವಿವಿಧ ಜಾತಿಯ ಸಸಿಗಳನ್ನು ವಿತರಿಸಲಾಗುತ್ತಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವಿವಿಧ ಜಾತಿಯ ಸಸಿ ನೆಡುವ ಕಾರ್ಯಕ್ರಮವನ್ನು ವಿಶ್ವ ಪರಿಸರ ದಿನಾಚರಣೆಯ ನಿಮಿತ್ಯ ಹಮ್ಮಿಕೊಳ್ಳಲಾಗಿದೆ. ರಸ್ತೆ ಬದಿ, ಶಾಲಾ- ಕಾಲೇಜ್ ಆವರಣ, ಸರ್ಕಾರಿ ಜಮೀನುಗಳಲ್ಲಿ ಸಸಿ ನೆಡುವ ಕಾರ್ಯ ಆರಂಭವಾಗಿದೆ ಎಂದು ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ ಪಾಟೀಲ ಹೇಳಿದರು.