Haveri, ZP DS, Weither Change, Training, Camp,  
ಹಾವೇರಿ

ಬಾಲ್ಯದಿಂದಲೇ ಪರಿಸರ ಸಂರಕ್ಷಣೆಯ ಸಂಸ್ಕಾರ ಬೆಳೆಸಿ; ಜಿಪಂ ಉಪ ಕಾರ್ಯದರ್ಶಿ ಡಾ.ಬಿ.ಆರ್.ಪುನೀತ ಹೇಳಿಕೆ

ಹಾವೇರಿ: ಪರಿಸರ ಸಂರಕ್ಷಣೆಯಲ್ಲಿ ಶಿಕ್ಷಣ ಇಲಾಖೆ ಜವಾಬ್ದಾರಿ ಹೆಚ್ಚಾಗಿದೆ. ಪರಿಸರ ಸಂರಕ್ಷಣೆ ಎಂಬುದು ಕೇವಲ ಕರ್ತವ್ಯವಾಗಿರಬಾರದು. ಬಾಲ್ಯದಿಂದಲೇ ಮಕ್ಕಳ ಮನ-ಮನೆಗಳಲ್ಲಿ ಪರಿಸರ ಸಂರಕ್ಷಣೆಯ ಸಂಸ್ಕಾರ ಬೆಳೆಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ಬಿ.ಆರ್.ಪುನೀತ ಹೇಳಿದರು.
ತಾಲೂಕಿನ ದೇವಗಿರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಜ್ಯ ಹವಾಮಾನ ಬದಲಾವಣೆ ಕುರಿತು ಕ್ರಿಯಾ ಯೋಜನೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹೊಸದಾಗಿ ಜಾರಿಯಾಗಿರುವ ಘನ ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಧೀನದ ಸಂಸ್ಥೆಯಾಗಿದೆ. ಸರ್ಕಾರದ ನಿರ್ದೇಶನದಂತೆ ಸಂಸ್ಥೆಯು ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ ಸಿದ್ಧಪಡಿಸಿದೆ. 2024ರಲ್ಲಿ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಈ ಕ್ರಿಯಾ ಯೋಜನೆ ಅನುಮೋದನೆ ಪಡೆದಿದೆ ಎಂದು ಹೇಳಿದರು.
ಈ ಯೋಜನೆಯಡಿ ಹವಾಮಾನ ಬದಲಾವಣೆಗೆ ಸಂಬಂಧಿಸಿದ ವಿವಿಧ ಕಾರ್ಯಾಂಶಗಳ ಆಧಾರದ ಮೇಲೆ ರಾಜ್ಯದ ವಿವಿಧ ಇಲಾಖೆಗಳು ಕಾರ್ಯಕ್ಷಮತಾ ಸೂಚಕಗಳನ್ನು ಹಾಗೂ ಗುರಿಗಳನ್ನು ನಿಗದಿಪಡಿಸಿವೆ. ಈ ಗುರಿಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಪಾಲುದಾರ ಸಂಸ್ಥೆಗಳು ಗಮನ ಹರಿಸಬೇಕು ಎಂದರು.
ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದೊಂದಿಗೆ 2025-26ನೇ ಸಾಲಿನಲ್ಲಿ ರಾಜ್ಯದ 22 ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಇದರ ಮುಂದುವರಿದ ಭಾಗವಾಗಿ 2026-26ನೇ ಸಾಲಿನಲ್ಲಿ ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ವಿಸ್ತರಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಹಾವೇರಿಯ ಮುಖ್ಯ ಯೋಜನಾಧಿಕಾರಿ ಎಚ್.ವೈ.ಮೀಸಿ ಮಾತನಾಡಿ, ಹವಾಮಾನ ಬದಲಾವಣೆಯ ಪ್ರತಿಕೂಲ ಪರಿಣಾಮಗಳು ಹಾಗೂ ತರಬೇತಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಸಂಶೋಧನಾ ವಿಜ್ಞಾನಿ ಪವಿತ್ರಾ ಪಿ. ನಾಯಕ ಹಾಗೂ ಜಲಸಂಪನ್ಮೂಲ ತಜ್ಞೆ ಡಾ.ಉಷಾ ಉಪನ್ಯಾಸ ನೀಡಿದರು.
ಅಧಿಕಾರಿಗಳಾದ ಬಸವರಾಜ ಬಾರ್ಕಿ, ರುಚಿತಾ, ರಾಘವೇಂದ್ರ ಎನ್., ಇತರರು ಪಾಲ್ಗೊಂಡಿದ್ದರು.