ಸವಣೂರ ತಾಲೂಕು ಹೊಸನೀರಲಗಿ ಗ್ರಾಮದಲ್ಲಿ ಭಾನುವಾರ ಏರ್ಪಡಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಪಾಲ್ಗೊಂಡು ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ಸಚಿವ ಸತೀಶ ಜಾರಕಿಹೊಳಿ, ಶಾಸಕ ಯಾಸೀರಅಹ್ಮದಖಾನ ಪಠಾಣ, ಅಜ್ಜಂಪೀರ್ ಖಾದ್ರಿ ಹಾಗೂ ಇತರರು ಇದ್ದರು. 
ಹಾವೇರಿ

ಹೊಸನೀರಲಗಿ ಶಾಲೆಗೆ 10ಲಕ್ಷ ರೂ. ಅನುದಾನ

ಸವಣೂರ: ಎಲ್ಲ ಸಮಾಜಗಳು ಸಾಮರಸ್ಯದಿಂದ ಇರುವಂತಹುದು ಹೊಸನೀರಲಗಿ ಗ್ರಾಮ. ಗ್ರಾಮದಲ್ಲಿ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಿಶೇಷ ಅನುದಾನ ನೀಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಸರ್ಕಾರವನ್ನು ಒತ್ತಾಯಿಸಿದರು.
ತಾಲೂಕಿನ ಹೊಸನೀರಲಗಿ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ, ಪ್ರೌಢ ಶಾಲೆಯಲ್ಲಿ ಭಾನುವಾರ ಏರ್ಪಡಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದಲ್ಲಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.  75 ವರ್ಷದ ಈ ಸಂದರ್ಭದಲ್ಲಿ ಶಾಲೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಂಸದರ ನಿಧಿಯಿಂದ 10 ಲಕ್ಷ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.
 ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಶಿಗ್ಗಾಂವಿ-ಸವಣೂರು ಶಾಸಕ ಯಾಸೀರಅಹ್ಮದಖಾನ ಪಠಾಣ ಅವರು ಶಾಲೆಯ 75ನೇ ವರ್ಷದ ಲಾಂಛನ ಅನಾವರಣಗೊಳಿಸಿ ಮಾತನಾಡಿದರು.
ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ರಾಣೆಬೆನ್ನೂರಿನ ಶನೇಶ್ವರಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಎಸ್‌ಡಿಎಂಸಿ ಅಧ್ಯಕ್ಷ ಧರಿಯಪ್ಪಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ ಖಾದ್ರಿ, ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಪ್ರಮುಖರಾದ ಗಂಗಾಧರ ಬಾಣದ, ಕಾಂತೇಶ ವಾಲ್ಮೀಕಿ, ಫಕೀರಪ್ಪ ವಾಲ್ಮೀಕಿ, ನಾಗಪ್ಪ ತಿಪ್ಪಕ್ಕನವರ, ಶಿವರಾಜ ಅಮರಾಪುರ, ಗ್ರಾಪಂ ಸದಸ್ಯರು, ಇತರರು ಪಾಲ್ಗೊಂಡಿದ್ದರು.
ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರನ್ನು, ವಿವಿಧ ಕ್ಷೇತ್ರಗಳ ಸಾಧಕರನ್ನು ಮತ್ತು ದಾನಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು. ಇದಕ್ಕೂ ಮೊದಲು ಅಮೃತ ಮಹೋತ್ಸವ ಅಂಗವಾಗಿ ಶಾಲಾ ಸ್ತಬ್ಧ ಚಿತ್ರ ಮೆರವಣಿಗೆ ನಡೆಯಿತು. ಬೆಳಗ್ಗೆ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ 45 ಯುವಕರು  ರಕ್ತದಾನ ಮಾಡಿದರು. ಉಚಿತ ನೇತ್ರ ತಪಾಸಣೆ ಶಿಬಿರ ಜರುಗಿತು.
 ಸಂಜೆ  ಶಾಲಾ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.