ಮೈಸೂರು: ಎರಡನೇ ಬಾರಿ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಅನಿಲ್ ಚಿಕ್ಕಮಾದು ಅವರಿಗೆ ಜಂಗಲ್ ಲಾಡ್ಜಸ್ ಆ್ಯಂಡ್ ರೆಸಾರ್ಟ್ ಅಧ್ಯಕ್ಷ ಸ್ಥಾನ ಒಲಿದಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಮೇಲೆ ಕಣ್ಣಿಟ್ಟಿದ್ದ ಅನಿಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಬಿಡುಗಡೆ ಮಾಡಿರುವ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನದಲ್ಲಿ ಜಂಗಲ್ ಲಾಡ್ಜಸ್ ಆ್ಯಂಡ್ ರೆಸಾರ್ಟ್ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಹೀಗಾಗಿ ಇದಕ್ಕೆ ಈಗ ತೃಪ್ತಿಪಟ್ಟುಕೊಳ್ಳಬೇಕಿದೆ.
ತಂದೆ ಚಿಕ್ಕಮಾದು ಅವರು ಜೆಡಿಎಸ್‌ನಿಂದ ಎಚ್.ಡಿ.ಕೋಟೆಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ ಅವರ ಅಕಾಲಿಕ ನಿಧನದಿಂದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಅನಿಲ್, ತಂದೆ ನಿಧನದ ಅನುಕಂಪದ ಮೇಲೆ ವಿಧಾನಸಭೆ ಪ್ರವೇಶಿಸಲು ಸಿದ್ಧತೆ ನಡೆಸಿದರು. ಆದರೆ ಜೆಡಿಎಸ್‌ನಲ್ಲಿ ನಡೆದ ರಾಜಕೀಯ ಬೆಳವಣಿಗೆಯಿಂದ ಅನಿಲ್ ಅವರಿಗೆ ಟಿಕೆಟ್ ದೊರೆಯುವ ಸಾಧ್ಯತೆ ಇಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ಮನಗಂಡು ಮಾಜಿ ಸಂಸದ ಆರ್.ಧ್ರುವನಾರಾಯಣ ಅವರು, ಅನಿಲ್ ಅವರನ್ನು ಕಾಂಗ್ರೆಸ್‌ಗೆ ಕರೆತಂದು, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರ ಮೂಲಕ ಟಿಕೆಟ್ ಕೊಡಿಸಿದರಲ್ಲದೇ, ಅವರ ಗೆಲುವಿಗೂ ಶ್ರಮವಹಿಸಿದ್ದರು.
ಧ್ರುವನಾರಾಯಣ ಅವರು ನಿಧನರಾದ ಬಳಿಕ ನಡೆದ ಎರಡನೇ ಅವಧಿಯ ವಿಧಾನಸಭೆ ಚುನಾವಣೆಯಲ್ಲಿಯೂ ಗೆಲುವು ಸಾಧಿಸಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವ ಸ್ಥಾನ ದೊರೆಯಲಿದೆ ಎನ್ನುವ ವಿಶ್ವಾಸ ಇಟ್ಟುಕೊಂಡಿದ್ದರು. ಆದರೆ ಪ್ರಬಲ ಆಕಾಂಕ್ಷಿಗಳು ಇದ್ದುದ್ದದರಿಂದ ಸಚಿವ ಸ್ಥಾನದಿಂದ ವಂಚಿತರಾಗಿದ್ದರು.
ಬಳಿಕ ಮುಡಾ ಅಧ್ಯಕ್ಷ ಸ್ಥಾನ ಪಡೆಯಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಒತ್ತಡ ಹಾಕಿದ್ದರು. ಆದರೆ ಮುಡಾ ಅಧ್ಯಕ್ಷರಾಗಲು ಸಿದ್ದರಾಮಯ್ಯ ಬಣದ ಆಪ್ತ ವಲಯದಲ್ಲಿಯೇ ತೀವ್ರ ಪೈಪೋಟಿ ಇದ್ದು, ಅನಿಲ್ ಚಿಕ್ಕಮಾದು ಅವರನ್ನು ನೇಮಕ ಮಾಡಲು ಪ್ರಬಲ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಜಿಲ್ಲಾವಾರು ಹಾಗೂ ಜಾತಿವಾರ ಪ್ರಾತಿನಿಧ್ಯದ ಮೂಲಕ ಅಳೆದು, ತೂಗಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಅನಿಲ್ ಅವರಿಗೆ ಜಂಗಲ್ ಲಾಡ್ಜಸ್ ಆ್ಯಂಡ್ ರೆಸಾರ್ಟ್ ಅಧ್ಯಕ್ಷ ಪಟ್ಟ ಒಲಿದಿದೆ.
ಬೆಂಬಲಿಗರಿಂದ ಪ್ರತಿಭಟನೆ: ಜಂಗಲ್ ಲಾಡ್ಜಸ್ ಆ್ಯಂಡ್ ರೆಸಾರ್ಟ್ ಅಧ್ಯಕ್ಷ ಸ್ಥಾನ ನೀಡಲಾಗುತ್ತಿದೆ ಎನ್ನುವ ಮಾಹಿತಿ ತಿಳಿದು ಶಾಸಕ ಅನಿಲ್ ಚಿಕ್ಕಮಾದು ಅವರ ಬೆಂಬಲಿಗರು ಎಚ್.ಡಿ.ಕೋಟೆ ಪಟ್ಟಣದಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು.
ಎರಡು ಬಾರಿ ಗೆಲುವು ಸಾಧಿಸಿರುವ ಶಾಸಕ ಅನಿಲ್ ಅವರಿಗೆ ಪ್ರಬಲ ಮುಡಾ ಅಧ್ಯಕ್ಷ ಸ್ಥಾನ ನೀಡಬೇಕು. ಕಾರ್ಯಕರ್ತರಿಗೆ ಮಣೆ ಹಾಕುವ ಜಂಗಲ್ ಲಾಡ್ಜಸ್ ಆ್ಯಂಡ್ ರೆಸಾರ್ಟ್ ಬೇಡ ಎಂದು ಒತ್ತಾಯಿಸಿದ್ದರು.