HD Kumaraswamy : ಇಡೀ ರಾಜ್ಯದ ಗಮನ ಸೆಳೆದಿದ್ದ ಬೊಂಬೆಯ ನಾಡು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ವಿರುದ್ಧ ಸೋಲು ಅನುಭವಿಸಿದ್ದಾರೆ. ಈ ಬಗ್ಗೆ ನಿಖಿಲ್ ತಂದೆ, ಮಾಜಿ ಸಿಎಂ ಹಾಗೂ ಹಾಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು (ನ.24) ಮಾಧ್ಯಮದವರೊಂದಿಗೆ ಮಾತನಾಡಿದ ಎಚ್ಡಿಕೆ, ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಈ ಫಲಿತಾಂಶವನ್ನು ಒಪ್ಪಿಕೊಳ್ಳಲೇಬೇಕಿದೆ. ಈ ಬಗ್ಗೆ ಈಗ ಚರ್ಚಿಸಿದರೆ ಯವುದೇ ಪ್ರಯೋಜನವಿಲ್ಲ ಎಂದು ಹೇಳಿದರು.
ಅಂದಹಾಗೆ ನಿಖಿಲ್ ಅವರಿಗೆ ಇದು ಮೂರನೇ ಸೋಲಾಗಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ವಿರುದ್ಧ ಮೊದಲ ಬಾರಿಗೆ ಸೋಲುಂಡ ನಿಖಿಲ್, 2023ರಲ್ಲಿ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸಿ ಎರಡನೇ ಬಾರಿ ಸೋತರು. ಇದೀಗ ಉಪಚುನಾವಣೆಯಲ್ಲಿ ಮತ್ತೆ ಸೋಲಿನ ಕಹಿ ಉಂಡಿದ್ದಾರೆ.
ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಣಕ್ಕಿಳಿದಿದ್ದ ಸಿ.ಪಿ ಯೋಗೇಶ್ವರ್, 1,12,388 ಮತಗಳನ್ನು ಸ್ವೀಕರಿಸಿದ್ದರೆ, ನಿಖಿಲ್ 87,031 ಮತಗಳನ್ನು ಪಡೆದುಕೊಂಡಿದ್ದಾರೆ. ಒಟ್ಟಾರೆ ಸಿಪಿವೈ 25,357 ಮತಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದರು.
ಚುನಾವಣಾ ಫಲಿತಾಂಶದ ಬಳಿಕ ಬಿಡದಿಯ ತೋಟದ ಮನೆಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನಿಖಿಲ್, ಚನ್ನಪಟ್ಟಣ ಕ್ಷೇತ್ರದ ಮತದಾರರ ತೀರ್ಪಿಗೆ ನಾನು ತಲೆಬಾಗುತ್ತೇನೆ. ಇದು ಬಯಸದೇ ಬಂದ ಉಪಚುನಾವಣೆ, 87 ಸಾವಿರ ಮತ ನೀಡಿದ ಚನ್ನಪಟ್ಟಣ ಜನರಿಗೆ ಧನ್ಯವಾದ ತಿಳಿಸುತ್ತೇನೆ. ಜೆಡಿಎಸ್, ಬಿಜೆಪಿ ಕಾರ್ಯಕರ್ತರಿಗೂ ನಾನು ಧನ್ಯವಾದ ಸಮರ್ಪಿಸುತ್ತೇನೆ ಎಂದು ಹೇಳಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಎಲ್ಲರಿಗೂ ಧ್ವನಿಯಾಗಿ ಕೆಲಸ ಮಾಡ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಮಾನವೇ ಅಂತಿಮ. ಎಲ್ಲಿ ಎಡವಿದ್ದೇವೆ ಅಂತ ಚರ್ಚೆ ಮಾಡುತ್ತೇವೆ. ಈ ಸೋಲನ್ನು ನಾನೇ ಸ್ವೀಕಾರ ಮಾಡ್ತೇನೆ. ಸೋತಿದ್ದೇನೆ ಅಂತ ಸುಮ್ಮನೇ ಕೂರಲ್ಲ, ಹೋರಾಟ ಮಾಡುತ್ತೇವೆ. ದೇವೇಗೌಡ್ರು ಹಾಗೂ ಕುಮಾರಸ್ವಾಮಿ ಅವರನ್ನು ಬೆಳೆಸಿದ್ದು ರಾಮನಗರ ಜಿಲ್ಲೆಯ ಜನ. ಚುನಾವಣೆ ಸಂದರ್ಭದಲ್ಲಿ ಜನರಿಗೆ ನಾನು ಭರವಸೆ ಕೊಟ್ಟಿದ್ದೆ. ಆ ಭರವಸೆ ಕೇವಲ ಚುನಾವಣೆಗೆ ಸಂಬಂಧಪಟ್ಟಿದ್ದಲ್ಲ. ನಾನು ಕೊಟ್ಟ ಮಾತನ್ನು ಹಿಂಪಡೆಯಲ್ಲ ಎಂದು ವಾಗ್ದಾನ ಮಾಡಿದ್ದಾರೆ.