ಜಿಲ್ಲೆ

ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಆಯ್ಕೆ 25ರಂದು

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ 4 ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ ಚುನಾವಣೆ ಅ. 25ರಂದು ಬೆಳಗ್ಗೆ 11 ಗಂಟೆಗೆ ಇಲ್ಲಿಯ ಪಾಲಿಕೆ ಆಯುಕ್ತರ ಸಭಾಭವನದಲ್ಲಿ ನಡೆಯಲಿದೆ.

ಮೇಯರ್ ರಾಮಪ್ಪ ಬಡಿಗೇರ ಆಯ್ಕೆ ಚುನಾವಣೆ ನಡೆಸುವರು. ಅ. 3ರಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟಣ್ಣವರ ಸದಸ್ಯರ ಆಯ್ಕೆ ಚುನಾವಣೆ ನಡೆಸಿಕೊಟ್ಟಿದ್ದರು.

ಪಾಲಿಕೆಯ ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ನಗರ ಯೋಜನೆ ಸ್ಥಾಯಿ ಸಮಿತಿ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿಗೆ ಅಧ್ಯಕ್ಷರ ಆಯ್ಕೆ ನಡೆಯಲಿದೆ. ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದ್ದು, ನಾಲ್ಕು ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಮಲ ಪಡೆಯ ಪಾಲಾಗಲಿದೆ.

ಬೆಳಗ್ಗೆ 9 ಗಂಟೆಯಿಂದ ನಾಮಪತ್ರಗಳ ವಿತರಣೆ, 10ರಿಂದ ನಾಮಪತ್ರಗಳ ಸಲ್ಲಿಕೆ, 11 ಗಂಟೆಗೆ ಚುನಾವಣೆ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಪಾಲಿಕೆ ಪ್ರಕಟಣೆ ತಿಳಿಸಿದೆ.