ಕುಶಾಲನಗರ:
ಮಳೆಯ ಸಂದರ್ಭ ಕುಶಾಲನಗರ ಪಟ್ಟಣದ ಕೆಲವು ಬಡಾವಣೆಗಳಲ್ಲಿ ಶಂಕಿತ ಜ್ವರ ಪ್ರಕರಣಗಳು ಕಂಡುಬAದಿದ್ದು, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಸೋಮವಾರ ಜಿಲ್ಲಾ ಆರೋಗ್ಯ ಇಲಾಖೆಯ ಸರ್ವೆ ಕಾರ್ಯ ತಂಡ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಲಾರ್ವ ಉತ್ಪತ್ತಿಯಾಗುವ ಸ್ಥಳಗಳ ನೀರಿನ ಮಾದರಿಯನ್ನು ಸಂಗ್ರಹಿಸಿತು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವಿಶ್ವಜ್ಞಾ ಮತ್ತಿತರರು ವಿವಿಧ ಬಡಾವಣೆಗಳು ಮತ್ತು ಮನೆಗಳಿಗೆ ಭೇಟಿ ನೀಡಿ ಸಾಂಕ್ರಾಮಿಕ ರೋಗ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸಿದರು.
ಜಿಲ್ಲಾ ಆರೋಗ್ಯ ಇಲಾಖೆಯ ಜಿಲ್ಲಾ ಎಂಟಮಾಲಜಿಸ್ಟ್ ಮಂಜುನಾಥ್ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಿಂದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವಿಶ್ವಜ್ಞಾ, ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಚಂದ್ರೇಶ್, ಮುಖೇಶ್, ರಘು ಮತ್ತು ಆಶಾ ಕಾರ್ಯಕರ್ತೆಯರು ಪಟ್ಟಣದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಈಡಿಸ್ ಲಾರ್ವಾ ಸಮೀಕ್ಷೆಯನ್ನು ನಡೆಸಿ ಅಡ್ಡ ಪರಿಶೀಲನೆಯನ್ನು ಮಾಡಿದರು.
ಇದೇ ವೇಳೆ ಸಾರ್ವಜನಿಕರಿಗೆ ಡೆಂಗ್ಯೂ ಜ್ವರ , ಮಲೇರಿಯ ಜ್ವರ, ಚಿಕೂನ್ ಗುನ್ಯಾ ಜ್ವರದ ಬಗ್ಗೆ ಹಾಗೂ ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳ ಬಗ್ಗೆ ಮತ್ತು ಎಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಆರೋಗ್ಯ ಶಿಕ್ಷಣ ಮಾಹಿತಿ ನೀಡಲಾಯಿತು.
ಮನೆಯ ಅಂಗಳ, ರಸ್ತೆ ಬದಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಚರಂಡಿ ಮತ್ತಿತರ ಕಡೆಗಳಲ್ಲಿ ನೀರು ನಿಲ್ಲದಂತೆ ಜಾಗ್ರತೆ ವಹಿಸಬೇಕು. ಮನೆಯ ಹೂವಿನ ಕುಂಡಗಳು, ಅಲ್ಲಲ್ಲಿ ಬಿಸಾಕಿರುವ ತೆಂಗಿನ ಚಿಪ್ಪು, ಟೈರ್, ರಸ್ತೆಯ ಗುಂಡಿಗಳು ಸೇರಿದಂತೆ ಯಾವುದೇ ಸ್ಥಳದಲ್ಲಿ ನೀರು ನಿಂತಲ್ಲಿ ಲಾರ್ವಗಳು ಉಂಟಾಗಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಆದ್ದರಿಂದ, ಎಲ್ಲೂ ನೀರು ನಿಲ್ಲದಂತೆ ಜಾಗ್ರತೆ ವಹಿಸಬೇಕು ಎಂದು ಮನೆ- ಮನೆಗಳಿಗೆ ಭೇಟಿ ನೀಡಿದ್ದ ಆರೋಗ್ಯ ಅಧಿಕಾರಿಗಳು ನಿವಾಸಿಗಳಿಗೆ ಮನವರಿಕೆ ಮಾಡಿದರು.
ಕುಶಾಲನಗರ ಪಟ್ಟಣದ ಕೆಲವು ಬಡಾವಣೆಗಳಲ್ಲಿ ಉದ್ಯಾನವನಗಳು ಸೂಕ್ತ ನಿರ್ವಹಣೆ ಇಲ್ಲದೆ ಗಿಡಗಂಟಿಗಳು ಬೆಳೆದು ನಿಂತಿದ್ದು, ಪಾರ್ಕ್ ನಲ್ಲಿ ಮಳೆ ನೀರು ಇದ್ದು, ತೇವಾಂಶ ಇರುವುದರಿಂದ ಪಾರ್ಕ್ ನ ಸುತ್ತಲಿನ ಪರಿಸರದಲ್ಲಿ ಹೆಚ್ಚು ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ ಎಂದು ನಾಗರಿಕರು ದೂರಿದ್ದಾರೆ.
ಕುಶಾಲನಗರ ಪಟ್ಟಣದ ಉದ್ಯಾನವನಗಳನ್ನು ಸ್ವಚ್ಛಗೊಳಿಸುವ ಕುರಿತು ಆರೋಗ್ಯ ಇಲಾಖೆಯ ವತಿಯಿಂದ ಪುರಸಭೆಯ ಆಡಳಿತ ಮಂಡಳಿಯ ಗಮನಕ್ಕೆ ತರಲಾಗುವುದು ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಆರೋಗ್ಯ ನಿರೀಕ್ಷಕರು ತಿಳಿಸಿದರು.