ಜಿಲ್ಲೆ

ನಾಳೆ 5 ಜಿಲ್ಲೆಗಳಲ್ಲಿ ಮಳೆ ಜೋರು: ಉಳಿದೆಡೆ ಸಾಧಾರಣ ವರ್ಷಧಾರೆ

ಹರೀಶ್​​ ಕೆ.ಸಿ.

ಬೆಂಗಳೂರು: ಪ್ರಸಕ್ತ ಸಾಲಿನ ಮುಂಗಾರು ಮುಗಿಯಲು ಕೆಲ ದಿನಗಳು ಬಾಕಿ ಇರುವಾಗ ರಾಜ್ಯದಲ್ಲಿ ಮುಂದಿನ 5 ದಿನ ಸಾಧಾರಣ ವರ್ಷಧಾರೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಬೆಂಗಳೂರು ನಗರ, ತುಮಕೂರು, ಉಡುಪಿ, ದಕ್ಷಿಣ ಕನ್ನಡ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ರಾಯಚೂರು ಸೇರಿ ಉತ್ತರ ಕರ್ನಾಟಕ ವ್ಯಾಪ್ತಿಯ ಪ್ರದೇಶಗಳಲ್ಲಿ ಗುರುವಾರ ಮುಂಜಾನೆ ಬಿರುಸಾಗಿ ಮಳೆ ಸುರಿದಿತ್ತು.

ಬಾಗಲಕೋಟೆ, ಬೆಳಗಾವಿ,ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರಿನಲ್ಲಿ ಸೆ.19 ರಂದು ಬಿರುಸಾಗಿ ಮಳೆಯಾಗುವ ಸಂಭವ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂ.ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಬೀದರ್,ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ ಮತ್ತು ರಾಯಚೂರಿನಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮುಂದಿನ 5 ದಿನ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರ ಮತ್ತು ಅದರ ಸುತ್ತಮುತ್ತ ಪ್ರದೇಶಗಳಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇರಲಿದೆ. ಈ ವೇಳೆ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಮತ್ತು 21 ಡಿ.ಸೆ. ಇರಲಿದೆ.