ಮೈಸೂರು: ನಗರದಲ್ಲಿ ಮಂಗಳವಾರ ಬೆಳಗ್ಗಿನ ಜಾವ ಧಾರಾಕಾರ ಮಳೆ ಸುರಿದಿದ್ದು, ಮಳೆಯಿಂದ ನಗರದಲ್ಲಿ ಆಹ್ಲಾದಕರ ವಾತಾವರಣ ನಿರ್ಮಾಣವಾಗಿದೆ.
ಗುಡುಗು, ಸಿಡಿಲು, ಗಾಳಿಯ ಆರ್ಭಟ ಇಲ್ಲದೆ ಮಳೆ ಸುರಿದ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಹಾನಿ ಉಂಟಾಗಿಲ್ಲ. ಬೆಳಗ್ಗೆ ಸುರಿದ ಧಾರಾಕಾರ ಮಳೆಯಿಂದ ನಗರದ ರಸ್ತೆಗಳಲ್ಲಿ ಮಳೆ ನೀರು ನದಿಯ ರೂಪದಲ್ಲಿ ಹರಿಯುತ್ತಿದ್ದ ದೃಶ್ಯಗಳು ಕಂಡು ಬಂತು. ಬೆಳಗ್ಗೆ ಮಳೆ ಸುರಿದ ಹಿನ್ನೆಲೆಯಲ್ಲಿ ಜನಜೀವನದ ಮೇಲೆ ಮಳೆ ಯಾವುದೇ ರೀತಿಯ ಪರಿಣಾಮ ಬೀರಲಿಲ್ಲ.
ಮೇ 3 ರಂದು ಸುರಿದ ಧಾರಾಕಾರ ಮಳೆಯಿಂದ ನಗರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಾನಿ ಉಂಟಾಗಿತ್ತು. ಮಳೆಯೊಂದಿಗೆ ಗಾಳಿಯ ತೀವ್ರತೆ ಹೆಚ್ಚು ಇದ್ದ ಹಿನ್ನೆಲೆಯಲ್ಲಿ ನಗರದ ಹಲವಾರು ಕಡೆಗಳಲ್ಲಿ ಮರಗಳು ಧರೆಗುರುಳಿ ಸಾಕಷ್ಟು ಪ್ರಮಾಣದಲ್ಲಿ ನಷ್ಟ ಉಂಟಾಗಿತ್ತು.