ಬೆಂಗಳೂರು: ಮುಂಗಾರು ಪ್ರಬಲಗೊಂಡಿರುವ ಕಾರಣದಿಂದ ಕರಾವಳಿ, ಮಲೆನಾಡು ಸೇರಿ ದಕ್ಷಿಣ ಕರ್ನಾಟಕ ವ್ಯಾಪ್ತಿಯ ಹಲವು ಜಿಲ್ಲೆಗಳಲ್ಲಿ ನಾಲ್ಕೈದು ದಿನ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜು.15ರಿಂದ ಜು.21ರವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಕೊಟ್ಟಿದೆ. ಈ ಅವಧಿಯಲ್ಲಿ ಕೆಲ ಆಯ್ದ ಪ್ರದೇಶಗಳಲ್ಲಿ ಗಂಟೆಗೆ 40-50 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಮುಂದಿನ 4 ದಿನ ಹಾಗೂ ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಹಾಸನ, ಮೈಸೂರು,ಚಾಮರಾಜನಗರದಲ್ಲಿ ಜು.18 ರಂದು ಜೋರಾಗಿ ಮಳೆಯಾಗುವುದರಿಂದ ಯೆಲ್ಲೋ ಅಲರ್ಟ್ ಇರಲಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ತುಮಕೂರು ಮತ್ತು ಮಂಡ್ಯದಲ್ಲಿ ಮುಂದಿನ 4 ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ ಸುರಿಯಲಿದೆ.ಈ ಅವಧಿಯಲ್ಲಿ ಕೆಲ ಜಿಲ್ಲೆಗಳ ಆಯ್ದ ಪ್ರದೇಶಗಳಲ್ಲಿಯೂ ಮಳೆಗಿಂತ ಗಾಳಿ ಜೋರಾಗಿ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.