ಜಿಲ್ಲೆ

ಪರಿಶಿಷ್ಟ ಜಾತಿ ಸಮೀಕ್ಷೆ ಯಶಸ್ವಿಗೆ ಸಹಕರಿಸಿ: ಎಸಿಎಸ್ ಉಮಾ ಮಹದೇವನ್ ಮನವಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದ ಯಶಸ್ವಿಗಾಗಿ ಸಹಕರಿಸಲು ರಾಜ್ಯ ಮಟ್ಟದ ಸಮನ್ವಯ ಸಮಿತಿಯ ಅಧ್ಯಕ್ಷೆ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ (ಎಸಿಎಸ್) ಮತ್ತು ಅಭಿವೃದ್ಧಿ ಆಯುಕ್ತೆ ಉಮಾ ಮಹದೇವನ್ ಅವರು ಪರಿಶಿಷ್ಟ ಜಾತಿ ಸಮುದಾಯದ ಮುಖಂಡರಲ್ಲಿ ಮನವಿ ಮಾಡಿದರು.

ನಗರದಲ್ಲಿ ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದಲ್ಲಿ ಪ್ರಗತಿ ಸಾಧಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಸಮುದಾಯ ಮುಖಂಡರು ಹಾಗೂ ಪದಾಧಿಕಾರಿಗಳೊಂದಿಗೆ ಮಂಗಳವಾರ ಬಿಬಿಎಂಪಿ ಕೇಂದ್ರ ಕಚೇರಿಯ ಡಾ. ರಾಜ್​​ಕುಮಾರ್ ಗಾಜಿನ ಮನೆಯಲ್ಲಿ ನಡೆದ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು.

ಹೈಕೋರ್ಟ್ ನಿರ್ದೇಶನದ ಮೇರೆಗೆ ಪರಿಶಿಷ್ಟ ಜಾತಿ/ಮೂಲ ಜಾತಿ ಸಮಗ್ರ ಸಮೀಕ್ಷೆಗಾಗಿ ನಿವೃತ್ತಿ ನ್ಯಾಯಮೂರ್ತಿ ಡಾ. ಎಚ್.ಎನ್.ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕ ಸದಸ್ಯತ್ವ ಆಯೋಗವನ್ನು ರಚಿಸಲಾಗಿದೆ. ಸಮೀಕ್ಷಾ ಕಾರ್ಯವನ್ನು ವೈಜ್ಞಾನಿಕವಾಗಿ ಜಾತಿ ತಿಳಿಯುವುದರ ಜತೆಗೆ ಸಾಮಾಜಿಕ ಹಾಗೂ ಆರ್ಥಿಕ ಹಿತದೃಷ್ಟಿಯಿಂದ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ಪ್ರತ್ಯೇಕ ಅಧಿಕಾರಿಗಳ ನಿಯೋಜನೆ:

ಸರ್ಕಾರದ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಮಾತನಾಡಿ, ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸುವ ಗುರಿಯಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವಾರ್ಡ್‌ಗಳಿಗೂ ಪ್ರತ್ಯೇಕ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಇದರಿಂದ ಸಮೀಕ್ಷೆಗೆ ವೇಗ ಸಿಗುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಈ ವೇಳೆ ಮಾಜಿ ಸಚಿವ ಎಚ್.ಆಂಜನೇಯ, ರಾಜ್ಯಮಟ್ಟದ ಸಮನ್ವಯ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ರಾಕೇಶ್ ಕುಮಾರ್, ಪಾಲಿಕೆಯ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್, ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು/ಪದಾಧಿಕಾರಿಗಳು ಹಾಜರಿದ್ದರು.

1.31 ಲಕ್ಷ ಮನೆಗಳ ಸಮೀಕ್ಷೆ:

ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ ಸಮೀಕ್ಷಾ ಕಾರ್ಯ ಸಕ್ರಿಯವಾಗಿ ನಡೆಯುತ್ತಿದ್ದು, ಮೇ 27ರವರೆಗೆ 8,215 ಗಣತಿದಾರರನ್ನು ನಿಯೋಜಿಸಲಾಗಿದೆ. ಈ ಪೈಕಿ ಈಗಾಗಲೇ 1,31,730 ಪರಿಶಿಷ್ಟ ಜಾತಿಯವರ ಮನೆಗಳಿಗೆ ಭೇಟಿ ನೀಡಿ 5,11,594 ಪರಿಶಿಷ್ಟ ಜಾತಿ ಸದಸ್ಯರನ್ನು ಗುರುತಿಸಲಾಗಿದೆ. ಪರಿಶಿಷ್ಟ ಜಾತಿಯಲ್ಲದ 28,10,832 ಮನೆಗಳಿಗೆ ಭೇಟಿ ನೀಡಿ ದತ್ತಾಂಶ ಸಂಗ್ರಹಿಸಲಾಗಿದೆ.

ಸಹಾಯವಾಣಿ:

ಪರಿಶಿಷ್ಟ ಜಾತಿ ಸಮೀಕ್ಷೆಯ ಕುರಿತು ಯಾವುದೇ ಸಮಸ್ಯೆ ಇದ್ದಲ್ಲಿ ಸಹಾಯವಾಣಿ 9481359000 ಕ್ಕೆ ಕರೆ ಮಾಡಿ ದೂರು ನೀಡಬಹುದು.

ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳಲು ಕೆಲವೆಡೆ ಹಿಂಜರಿಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅತ್ಯಗತ್ಯವಾಗಿದೆ. ಸಮುದಾಯದ ಜನರಿಗೆ ಸಮೀಕ್ಷೆಯಲ್ಲಿ ತಪ್ಪದೆ ಪಾಲ್ಗೊಳ್ಳಲು ಅರಿವು ಮೂಡಿಸಲು ಮುಖಂಡರು ಮುಂದಾಗಲಿ. ಪಾಲಿಕೆ ವತಿಯಿಂದ ವಿಶೇಷ ಶಿಬಿರಗಳ ವ್ಯವಸ್ಥೆ ಮಾಡಿಕೊಂಡು ಯಶಸ್ವಿಯಾಗಿ ಸಮೀಕ್ಷೆ ಪೂರ್ಣಗೊಳಿಸಲಾಗುವುದು.

- ಎಂ.ಮಹೇಶ್ವರ್ ರಾವ್, ಬಿಬಿಎಂಪಿ ಮುಖ್ಯ ಆಯುಕ್ತ