ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಪ್ರಕ್ರಿಯೆ ಮುಂದುವರಿಸಲು ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಈ ಮೂಲಕ ಚುನಾವಣೆಗೆ ಸಿಟಿ ಸಿವಿಲ್ ಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿದೆ.
ಸಿಟಿ ಸಿವಿಲ್ ಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತಡೆಯಾಜ್ಞೆಯನ್ನು ತೆರವುಗೊಳಿಸಿ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಸಂಘದ ಚುನಾವಣೆ ಪ್ರಕ್ರಿಯೆ ಯಥಾಸ್ಥಿತಿ ಮುಂದುವರಿಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಶ್ರೀನಿವಾಸ್ ಪ್ರಕಟಣೆ ಹೊರಡಿಸಿದ್ದಾರೆ.
ಸಂಘದ 2024-2029ನೇ ಅವಧಿಯ ಜಿಲ್ಲಾ, ತಾಲೂಕು, ಯೋಜನಾ ಶಾಖೆಗಳು, ಬೆಂಗಳೂರು ನಗರ ರಾಜ್ಯ ಪರಿಷತ್ತು ಸದಸ್ಯ ಸ್ಥಾನದ ಸಾರ್ವತ್ರಿಕ ಚುನಾವಣೆ ನಡೆಸಲು ಸೆ.12ರಂದು ಚುನಾವಣಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ. ಸೆ.17ರಿಂದ ಬೆಂಗಳೂರು ನಗರ ರಾಜ್ಯ ಪರಿಷತ್ತು ಸದಸ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಈಗಾಗಲೆ ಅಂತಿಮ ಚುನಾವಣಾ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿ, ಆಯ್ಕೆಯಾದವರ ಹೆಸರನ್ನು ಚುನಾವಣಾಧಿಕಾರಿಗಳು ಪ್ರಕಟಿಸಿದ್ದಾರೆ. ಅವಿರೋಧವಾಗಿ ಆಯ್ಕೆಯಾಗದ ಕ್ಷೇತ್ರ ಹೊರತುಪಡಿಸಿ ಇನ್ನುಳಿದ ಕ್ಷೇತ್ರಗಳಿಗೆ ಅ.8ರಿಂದ ಚುನಾವಣೆ ನಡೆಯಲಿದೆ ಎಂದರು.