ಜಿಲ್ಲೆ

ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್‌ನಲ್ಲಿ ಉಚ್ಚಾಟನೆ ವಿಚಾರವಾಗಿ ಹೈಡ್ರಾಮಾ

ಚಿಕ್ಕಬಳ್ಳಾಪುರ: ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಎಸ್.ರಕ್ಷಾ ರಾಮಯ್ಯ ಸೋಲಿಗೆ ಶಾಸಕ ಪ್ರದೀಪ್ ಈಶ್ವರ್ ಹೇಳಿಕೆಗಳೇ ಕಾರಣ ಎಂಬುದಾಗಿ ಆರೋಪಿಸಿದ್ದ ಯುವ ಕಾಂಗ್ರೆಸ್‌ನ ಜಂಟಿ ಕಾರ್ಯದರ್ಶಿ ಜಗದೀಶ್‌ರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಅನ್ಯ ಪಕ್ಷದ ಅಭ್ಯರ್ಥಿಯೊಂದಿಗೆ ಪ್ರಚಾರದಲ್ಲಿ ಭಾಗವಹಿಸಿರುವುದು ಮತ್ತು ಪಕ್ಷದ ನಾಯಕರ ಬಗ್ಗೆ ಸಾರ್ವಜನಿಕವಾಗಿ ಅವಹೇಳನಾರಿ ಮಾತನಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗೆ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷ ಉಚ್ಚಾಟಿಸಲಾಗಿದೆ ಎಂದು ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಕೆ.ರೆಹಮಾನ್ ಖಾನ್ ಆದೇಶದಲ್ಲಿ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ಪುತ್ರ ಜಗದೀಶ್. ಯುವ ಕಾಂಗ್ರೆಸ್‌ನ ಜಂಟಿ ಕಾರ್ಯದರ್ಶಿಯಾಗಿ ಜವಾಬ್ದಾರಿ ಹೊತ್ತಿದ್ದರು.

* ಕಾಂಗ್ರೆಸ್‌ನಲ್ಲಿ ಹೈ ಡ್ರಾಮಾ

ಉಚ್ಚಾಟನೆ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ಹೈ ಡ್ರಾಮಾ ನಡೆಯುತ್ತಿದೆ. ಒಂದೆಡೆ ಶಾಸಕರು ಶಿಫಾರಸಿನಂತೆ ಶಿಸ್ತು ಕ್ರಮ ಕೈಗೊಂಡಿದ್ದರೆ, ಮತ್ತೊಂದೆಡೆ ಆದೇಶವನ್ನು ರದ್ದುಪಡಿಸಲು ಕಾಂಗ್ರೆಸ್ ನಿಯೋಗವು ವರಿಷ್ಠರ ಭೇಟಿ ಮಾಡಿ ಮನವೊಲಿಸುವಲ್ಲಿ ಯಶಸ್ವಿಯಾಗಿದೆ.

ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಆಂಜಿನಪ್ಪ, ನಗರಸಭಾ ಹಿರಿಯ ಸದಸ್ಯ ಎಸ್.ಎಂ.ರಫಿಕ್ ಸೇರಿದಂತೆ ಹಲವರು ನೇರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ರನ್ನು ಭೇಟಿ ಮಾಡಿದ್ದಾರೆ. ಜಗದೀಶ್ ಉಚ್ಚಾಟನೆಯ ಆದೇಶವನ್ನು ಹಿಂಪಡೆಯಲು ಒತ್ತಾಯಿಸಿದ್ದಾರೆ. ಇದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ. ಪರಸ್ಪರ ರಾಜೀ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

* ಭಿನ್ನಮತ ಸ್ಫೋಟ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಳಿಕ ಪಕ್ಷದಲ್ಲಿಯೇ ನಾಯಕರ ಕಾರ್ಯ ವೈಖರಿಗೆ ಅಸಮಾಧಾನ ವ್ಯಕ್ತವಾಗಿದೆ. ಈಗಾಗಲೇ ಮುಖಂಡರು ವರಿಷ್ಠರಿಗೆ ದೂರು ಸಲ್ಲಿಸಿದ್ದಾರೆ.