ಹಿರೇಕೆರೂರ: ತಾಲೂಕಿನ ದೂದಿಹಳ್ಳಿ ಗ್ರಾಮದ ಹೊರವಲಯದಲ್ಲಿ ನಿರ್ವಣಗೊಂಡ ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆ ಮತ್ತು 17.78 ಕೋಟಿ ರೂ. ವೆಚ್ಚದಲ್ಲಿ ನಿರ್ವಣಗೊಂಡ ಮುರಾರ್ಜಿ ದೇಸಾಯಿ ವಸತಿ ಶಾಲೆ ನೂತನ ಕಟ್ಟಡಗಳ ಉದ್ಘಾಟನೆ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮಾ. 7ರಂದು ಮುಖ್ಯಮಂತ್ರಿ ಹಾಗೂ ವಿವಿಧ ಇಲಾಖೆಯ ಸಚಿವರು ಆಗಮಿಸಲಿದ್ದಾರೆ.
ಕಾರ್ಯಕ್ರಮದ ಯಶಸ್ವಿಗೆ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ತಿಳಿಸಿದರು.
ತಾಲೂಕಿನ ದೂದಿಹಳ್ಳಿ ಗ್ರಾಮದ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಗಳನ್ನು ಶುಕ್ರವಾರ ಪರಿಶೀಲಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಿವಿಧ ಸಚಿವರು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ನೇರವಾಗಿ ದೂದಿಹಳ್ಳಿ ಗ್ರಾಮಕ್ಕೆ ಮಧ್ಯಾಹ್ನ 12 ಗಂಟೆಗೆ ಆಗಮಿಸಲಿದ್ದಾರೆ. ನಂತರ ವಿವಿಧ 21 ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದರು.
ಆಗಮಿಸಲಿರುವ ಗಣ್ಯರು: ಉಪಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಮತ್ತು ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಕಾರಜೋಳ, ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ, ರಾಜ್ಯ ಗೃಹ ಮತ್ತು ಸಹಕಾರಿ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಹಾಗೂ ಕಾನೂನು ಸಂಸದೀಯ ವ್ಯವಹಾರ ಸಚಿವ ಜೆ.ಸಿ. ಮಾಧುಸ್ವಾಮಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶಕುಮಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ, ಸಂಸದರಾದ ಶಿವಕುಮಾರ ಉದಾಸಿ, ಬಿ.ವೈ. ರಾಘವೇಂದ್ರ, ಶಾಸಕರಾದ ಸಿ.ಎಂ. ಉದಾಸಿ, ನೆಹರೂ ಓಲೇಕಾರ, ವಿರೂಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಪೂಜಾರ, ಜಿ.ಪಂ, ತಾಪಂ, ಪಪಂ, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸ್ಥಳಿಯ ಜನಪ್ರತಿನಿಧಿಗಳು, ಸಾರ್ವಜನಿಕರು, ರೈತರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಕಾಯಕ್ರಮದಲ್ಲಿ ಒಟ್ಟು 10 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಬರುವ ಎಲ್ಲ ಸಾರ್ವಜನಿಕರಿಗೆ, ಗಣ್ಯರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಚಿವ ಪಾಟೀಲ ತಿಳಿಸಿದರು.
ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಷಣ್ಮುಖ ಮಳಿಮಠ, ಜಿ. ಶಿವನಗೌಡ್ರ, ಡಿ.ಸಿ. ಪಾಟೀಲ, ಹೂವಪ್ಪ ವಡ್ಡಿನಕಟ್ಟಿ, ಮುತ್ತಪ್ಪ ನೇಸ್ವಿ, ಹಿರಿಯಪ್ಪ ವಡ್ಡರ, ಕಿರಣ ಮುತ್ತಗಿ, ರವಿಶಂಕರ ಬಾಳಿಕಾಯಿ, ಆರ್.ಎನ್. ಗಂಗೋಳ, ಗಂಗಾಧರ ಬೊಗೇರ, ಮಹೇಂದ್ರ ಬಡಳ್ಳಿ, ಗುರುಶಾಂತ ಯತ್ತಿನಹಳ್ಳಿ, ಎಸ್.ಬಿ. ಪಾಟೀಲ, ಅಶೋಕ ಜಾಡಬಂದಿ, ತಹಸೀಲ್ದಾರ್ ರಿಯಾಜುದ್ದಿನ್ ಭಾಗವಾನ್, ತಾಪಂ ಇಒ ಶ್ರೀನಿವಾಸ್ ಎಚ್.ಜಿ., ಡಿವೈಎಸ್ಪಿ ಟಿ.ವಿ. ಸುರೇಶ, ಸಿಪಿಐ ಮಂಜುನಾಥ ಪಂಡಿತ ಹಾಗೂ ಗ್ರಾಮಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು, ಕಾರ್ಯಕರ್ತರು ಇದ್ದರು.