ಜಿಲ್ಲೆ

ವಿದ್ಯಾರ್ಥಿಗಳನ್ನು ಸದೃಢಗೊಳಿಸಲು ಕ್ರೀಡೆ ಅವಶ್ಯ: ಶಾಸಕ ರವಿಕುಮಾರ್ ಗಣಿಗ ಅಭಿಮತ

ಮಂಡ್ಯ: ಸದೃಢ ವಿದ್ಯಾರ್ಥಿಗಳನ್ನಾಗಿ ರೂಪಿಸಲು ಕ್ರೀಡೆ ಅತ್ಯವಶ್ಯಕ ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದರು.

ತಾಲೂಕಿನ ಉಮ್ಮಡಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಉಮ್ಮಡಹಳ್ಳಿ ಗ್ರಾಪಂ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ದಕ್ಷಿಣ ವಲಯ ಸಹಯೋಗದಲ್ಲಿ ಆಯೋಜಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಹಳೇಬೂದನೂರು ವೃತ್ತದ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿನ ಗ್ರಾಮೀಣ ಮಟ್ಟದ ಕ್ರೀಡಾಪಟುಗಳೇ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಕ್ರೀಡೆಗಳಲ್ಲಿ ಸೋಲು-ಗೆಲುವು ಏನೇ ಇರಬಹುದು. ಆದರೆ ಭಾಗವಹಿಸುವಿಕೆ ಮುಖ್ಯವಾಗುತ್ತದೆ. ಶಾಲೆಯಲ್ಲಿ 50 ವಿದ್ಯಾರ್ಥಿಗಳಿದ್ದರೆ ಎಲ್ಲರೂ ಭಾಗವಹಿಸಿ ಎಂದು ಸಲಹೆ ನೀಡಿದರು.

ಮನ್ಮುಲ್ ನಿರ್ದೇಶಕ ಉಮ್ಮಡಹಳ್ಳಿ ಶಿವಕುಮಾರ್, ಆರ್‌ಎಪಿಸಿಎಂಎಸ್ ಅಧ್ಯಕ್ಷ ಯು.ಸಿ.ಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವು, ಮುಖ್ಯಶಿಕ್ಷಕ ನಾಗರಾಜು, ಶಿಕ್ಷಕರ ಸಂಘದ ಅಧ್ಯಕ್ಷ ಮಂಗಲ ಶಿವಣ್ಣ ಇತರರಿದ್ದರು.